ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಣೆ ಅಗತ್ಯ: ಸಚಿವ ಈಶ್ವರ್ ಖಂಡ್ರೆ
ಬೀದರ್ : ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ 'ಸುವರ್ಣ ಮಹೋತ್ಸವ ' ಕಾರ್ಯಕ್ರಮ ಉದ್ಘಾಟಿಸಿ, ಸಂವಿಧಾನದ ಪ್ರತಿ ಬೋಧಿಸಿ ಅವರು ಮಾತನಾಡಿದರು.
ಶುದ್ಧ ಗಾಳಿ , ನೀರು, ಆಹಾರ ನೀಡುವುದರ ಮೂಲಕ ಭವಿಷ್ಯದ ಜನರಿಗೆ ಉತ್ತಮ ಆರೋಗ್ಯ ನೀಡುವುದು ನಮ್ಮ ಕರ್ತವ್ಯವಾಗಿದೆ. ಇಂದಿನ ಜನರು ಎದರುಸುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಅದು ಜಾಗತಿಕ ತಾಪಮಾನವಾಗಿದೆ. ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆ, ಅತಿಯಾದ ಇಂಧನ ಬಳಕೆ, ರಾಸಾಯನಿಕ ಕೈಗಾರಿಕೆಗಳಿಂದ ಘನ ವಾಯು ಸೋಸುವಿಕೆಯಿಂದಾಗಿ ತಾಪಮಾನ ಹೆಚ್ಚಳವಾಗುತ್ತಿದೆ. ಏಕ ಬಳಿಕ ಪ್ಲಾಸ್ಟಿಕ್ ಬಳಕೆ ಮಾಡಬೇಕು. ಘನತ್ಯಾಜ್ಯ ಸಂಸ್ಕರಿಸಿ ಅದನ್ನು ಮರುಬಳಕೆ ಮಾಡುವ ಕ್ರೀಯಾ ಯೋಜನೆ ಹಾಕಬೇಕು. ಸ್ವಚ್ಛ ಬೀದರ್, ಸುಂದರ ಬೀದರ್, ನಿರ್ಮಲ ಬೀದರ್ ಮಾಡೊಣ ಎಂದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಅವರು ಮಾತನಾಡಿ, ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಅನೇಕ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. 1972 ರಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1973ರಲ್ಲಿ ಹುಲಿ ಸಂರಕ್ಷಣೆಗೆ ಟೈಗರ್ ಪ್ರಾಜೆಕ್ಟ್, 1974ರಲ್ಲಿ ಜಲ ಸಂರಕ್ಷಣಾ ಕಾಯ್ದೆ ಜಾರಿಗೆ ತಂದರು. ಜಲ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಾಪಿಸಲಾಯಿತು. ಘನತ್ಯಾಜ್ಯ, ಇ-ತ್ಯಾಜ್ಯ, ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯಗಳನ್ನು ನಿಯಂತ್ರಿಸಿ, ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ತಮ್ಮ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಪರಿಸರವಾದಿಗಳಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣುಕುಮಾರ್ ಎಂ. ಮೋದಿ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಅಧ್ಯಕ್ಷ ಬಾಬು ಹೊನ್ನನಾಯ್ಕ್, ಮಹಾನಗರ ಪಾಲಿಕೆಯ ಅಧ್ಯಕ್ಷ ಮಹಮ್ಮದ್ ಗೌಸ್, ಬುಡಾ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಡಿಸಿ ಶಿಲ್ಪಾ ಶರ್ಮಾ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಕಛೇರಿ ಕಲಬುರಗಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳಿಧರ್ ಹಾಗೂ ಬೀದರ್ ನ ಪ್ರಾದೇಶಿಕ ಪರಿಸರ ಅಧಿಕಾರಿ ಮೃತ್ಯುಂಜಯ ಬಿ.ಬಸನಕೊಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.