ಹುಮನಾಬಾದ್ನಲ್ಲಿ 31.05 ಕೋಟಿ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ
ಹುಮನಾಬಾದ್: ಪಟ್ಟಣಕ್ಕೆ ಜಲಸುದ್ಧಿ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ 2.0ರಡಿ 31.05 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯ ನಿರ್ಮಾಣ ಮತ್ತು ಉನ್ನತೀಕರಣ ಕಾಮಗಾರಿಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.
ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ, ಜಲಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಹಾಗೂ ಹುಮನಾಬಾದ್ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಘನತ್ಯಾಜ್ಯ ನಿರ್ವಹಣೆಗಾಗಿ ಈ ಹಿಂದೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೆ 31 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.
ಕಳಪೆ ಕಾಮಗಾರಿಗಳ ಕುರಿತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲೇ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದರು.
ಜೆಜೆಎಂ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದರೆ, ಕಾಮಗಾರಿ ಪೂರ್ಣಗೊಂಡ ಬಳಿಕ ಅವುಗಳನ್ನು ಸರಿಪಡಿಸುವುದು ಸಂಬಂಧಪಟ್ಟವರ ಜವಾಬ್ದಾರಿಯಾಗಿದೆ. ವಿಬಿ-ಜಿ ರಾಮ್ ಜಿ ಯೋಜನೆಯಡಿ ಬಸ್ ಶೆಲ್ಟರ್ಗಳನ್ನು ನಿರ್ಮಿಸುವ ಕಾರ್ಯ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಭಾಗಕ್ಕೆ ಅನುದಾನವೇ ಬಂದಿರಲಿಲ್ಲ. ಆದರೆ, ನಮ್ಮ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು.
ಶಾಸಕ ಸಿದ್ದು ಪಾಟೀಲ್ ಮಾತನಾಡಿ, ಪಟ್ಟಣದ ಸ್ವಚ್ಛತೆಗೆ ಯುಜಿಡಿ ಯೋಜನೆ ಅತ್ಯಂತ ಮುಖ್ಯವಾಗಿದೆ. ಸ್ವಚ್ಛತೆ ಇದ್ದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಈ ಹಿಂದೆ 38 ಕೋಟಿ ರೂ. ಅನುದಾನದಲ್ಲಿ ಕೈಗೊಂಡ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಪೈಪ್ಗಳನ್ನು ಕಳವು ಮಾಡಲಾಗಿದೆ. ಕಾಮಗಾರಿಯನ್ನು ಹಸ್ತಾಂತರಿಸಿರುವ ದಾಖಲೆಗಳಿರುವ ಕಡತವೂ ಪುರಸಭೆಯಲ್ಲಿ ಲಭ್ಯವಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಅವರ ಎದುರೇ ದೂರಿದರು.
ಸಿಂಧನಕೇರಾ ಗ್ರಾಮದಲ್ಲಿರುವ ಕಸ ವಿಲೇವಾರಿ ಘಟಕದ ಕುರಿತು ಪ್ರಸ್ತಾಪಿಸಿದ ಅವರು, ಘಟಕಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿಯೂ ಇಲ್ಲ. ಸಿಂಧನಕೇರಾ ಗ್ರಾಮಸ್ಥರು ಕಸ ಸಾಗಿಸಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಎರಡು-ಮೂರು ದಿನಗಳ ಕಾಲ ಹುಮನಾಬಾದ್ ಪಟ್ಟಣದಲ್ಲೇ ಕಸ ಸಂಗ್ರಹವಾಗಿರುತ್ತದೆ. ತಾತ್ಕಾಲಿಕವಾಗಿ ಮನವಿ ಮಾಡಿ ಚಿಟಗುಪ್ಪಾ ಪಟ್ಟಣಕ್ಕೆ ಕಸ ಸಾಗಿಸಲು ವ್ಯವಸ್ಥೆ ಮಾಡಿದ್ದೇನೆ. ಆದರೆ, ಮುಂದಿನ ದಿನಗಳಲ್ಲಿ ಅಲ್ಲಿಯೂ ಅವಕಾಶ ಸಿಗುವುದಿಲ್ಲ. ಆದ್ದರಿಂದ ತಕ್ಷಣವೇ ಕಸ ವಿಲೇವಾರಿ ಘಟಕಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್ ಮಾತನಾಡಿ, ಹುಮನಾಬಾದ್ ಕ್ಷೇತ್ರದಲ್ಲಿ ಸುಮಾರು 80 ಕಾಮಗಾರಿಗಳು ಪೂರ್ಣಗೊಳ್ಳದೆ ಸ್ಥಗಿತಗೊಂಡಿವೆ ಎಂದು ದೂರಿದರು. ಮತ್ತೊಬ್ಬ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಮಾತನಾಡಿ, ಸಿಂಧನಕೇರಾ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬೀದರ್ ಶಾಸಕ ರಹೀಮ್ ಖಾನ್, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ಹೊನ್ನನಾಯಕ್, ಮೀನುಗಾರಿಕೆ ಅಭಿವೃದ್ಧಿ ಅಧ್ಯಕ್ಷೆ ಮಾಲಾ ಬಿ. ನಾರಾಯಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.