ಕನ್ನಡ ನಾಡು, ನುಡಿ ಸಂರಕ್ಷಣೆಗೆ ಸರಕಾರ ಬದ್ಧವಾಗಿದೆ : ಸಚಿವ ಈಶ್ವರ್ ಖಂಡ್ರೆ
ಬೀದರ್ : ಕನ್ನಡ ಭಾಷೆ, ನಾಡು, ನುಡಿಯ ಸಂರಕ್ಷಣೆಯ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ, ಕೃಷಿ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.
ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸವದ ಧ್ವಜರೋಹಣ ನೆರವೆರಿಸಿ ಮಾತನಾಡಿದ ಅವರು, ಕನ್ನಡ ಕೇವಲ ಭಾಷೆಯಾಗದೆ ನಮ್ಮ ಉಸಿರು ಮತ್ತು ಬದುಕಾಗಬೇಕು. ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸುವುದರ ಜೊತೆಗೆ ಅನ್ಯಭಾಷಿಕರನ್ನೂ ಕನ್ನಡದ ಮುಖ್ಯವಾಹಿನಿಗೆ ತರಬೇಕು ಎಂದರು.
ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣವಾಗುತ್ತಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. 2027ರ ಮೇ ತಿಂಗಳ ಬಸವ ಜಯಂತಿಯ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 770 ಅಮರಗಣಂಗಳ ಹೆಸರಿನಲ್ಲಿ 770 ಕಂಬಗಳನ್ನು ನಿರ್ಮಿಸಲಾಗುತ್ತಿದ್ದು, ರೋಬೋಟಿಕ್ ತಂತ್ರಜ್ಞಾನದ ಮೂಲಕ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಸೇರಿದಂತೆ 20 ಶರಣರ ಸಂಭಾಷಣೆಯ ಪ್ರಾತ್ಯಕ್ಷಿಕೆ ರೂಪಿಸಲಾಗುತ್ತಿದೆ. ಇಷ್ಟಲಿಂಗಪೂಜೆಯ ವೈಜ್ಞಾನಿಕ ಅನುಭವಕ್ಕೂ ಅವಕಾಶ ಕಲ್ಪಿಸಲಾಗಿದೆ. ಐಐಟಿ ಹೈದ್ರಾಬಾದ್ ಮತ್ತು ಐಐಟಿ ಖರಗಪೂರದ ನೆರವಿನಿಂದ ವೈದ್ಯಕೀಯ ಉಪಕರಣವೊಂದನ್ನು ವಿಶೇಷವಾಗಿ ರೂಪಿಸಲಾಗಿದ್ದು, ಅನುಭವ ಮಂಪಟಕ್ಕೆ ಬರುವ ಬಸವ ಭಕ್ತರಿಗೆ ಹಾಗೂ ಸಂದರ್ಶಕರಿಗೆ ವೈಜ್ಞಾನಿಕವಾಗಿ ಇಷ್ಟಲಿಂಗ ಪೂಜೆ ಮಾಡುವುದರಿಂದ ಮನಸ್ಸು, ಮೆದುಳು ಮತ್ತು ದೇಹದ ಮೇಲೆ ಆಗುವ ಪರಿಣಾಮದ ಸಾಕ್ಷಾತ್ ಅನುಭವ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಈ ಬಾರಿ ಎಲ್ನಿನೋ ಪ್ರಭಾವದಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಭೀಕರ ಬರಗಾಲ ಉಂಟಾಗಿದೆ. ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ತಲೆದೋರದಂತೆ ಕ್ರಮವಹಿಸಲು ಸೂಚಿಸಲಾಗಿದ್ದು, ರಾಜ್ಯದಲ್ಲಿ ಗ್ರಾಮೀಣ ಕುಡಿಯುವ ನೀರಿನ ನಿರ್ವಹಣೆಗಾಗಿ ಸರ್ಕಾರ ಇದುವರೆಗೆ ಒಟ್ಟು 306 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಪೈಕಿ ಬೀದರ ಜಿಲ್ಲೆಗೆ 11 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜನರಿಗೆ ಇರುವಲ್ಲಿಯೇ ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 3,175 ಕೋಟಿ ರೂ. ವೆಚ್ಚದಲ್ಲಿ 5,885 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 4,838 ಕಾಮಗಾರಿಗಳು ಪೂರ್ಣಗೊಂಡಿವೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 21 ಲಕ್ಷಕ್ಕೂ ಹೆಚ್ಚು ಮಾನವ ಉದ್ಯೋಗ ದಿನಗಳನ್ನು ಸೃಷ್ಟಿಸಲಾಗಿದ್ದು, 156 ಗ್ರಾಮ ಪಂಚಾಯಿತಿಗಳಲ್ಲಿ ಕೂಸಿನ ಮನೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಡಾ. ಶೈಲೇಂದ್ರ ಬೆಲ್ದಾಳೆ, ಕರ್ನಾಟಕ ಮೀನುಗಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ವಿಧಾನ ಪರಿಷತ್ ಸದಸ್ಯ ಎಂ.ಜಿ ಮೂಳೆ, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಸಹಾಯಕ ಆಯುಕ್ತ ಅಭಿನವ್ ಜೈನ್, ಅಪರ್ ಜಿಲ್ಲಾಧಿಕಾರಿ ಸುರೇಖಾ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು, ಶಾಲಾ-ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.