ಅತಿವೃಷ್ಟಿ : ತುರ್ತು, ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಮನವಿ
ಬೀದರ್ : ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ತುರ್ತು ಮತ್ತು ಹೆಚ್ಚಿನ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮನವಿ ಮಾಡಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2025ರ ಮುಂಗಾರು ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಲಾದ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರವಾಹ ಪರಿಸ್ಥಿತಿ, ಹಾನಿಗೊಳಗಾದ ಗ್ರಾಮಗಳು, ಮೂಲಸೌಕರ್ಯ, ಬೆಳೆ, ಮನೆ ಮತ್ತು ಇತರ ಹಾನಿ ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗೆ ವಿವರಿಸಿದ ಅವರು, ತುರ್ತು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವು ಒದಗಿಸಬೇಕು. ಹಾನಿಗೊಳಗಾದ ಕುಟುಂಬಗಳ ಪುನರ್ವಸತಿ ಕಾರ್ಯಗಳನ್ನು ತ್ವರಿತಗೊಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ್ ಸಹಾಯಕ ಆಯುಕ್ತ ಮೊಹಮದ್ ಶಕೀಲ್ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್ ಸೇರಿದಂತೆ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.