ಹುಮನಾಬಾದ್ | ಮೈದಾ ಹಿಟ್ಟು ತುಂಬಿದ್ದ ಲಾರಿ ಪಲ್ಟಿ : ತಪ್ಪಿದ ಅನಾಹುತ
ಹುಮನಾಬಾದ್: ಮೈದಾ ಹಿಟ್ಟು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ದುಬಲಗುಂಡಿ ಗ್ರಾಮದ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ವಾಹನ ಸಂಪೂರ್ಣ ಜಖಂಗೊಂಡಿದೆ.
ಸೋಮವಾರ ಮುಂಜಾನೆ ಹುಮನಾಬಾದ್-ಭಾಲ್ಕಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಸೇರಿದಂತೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಹುಮನಾಬಾದ್-ಭಾಲ್ಕಿ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿರುವುದೇ ಈ ರಸ್ತೆಯಲ್ಲಿ ನಿರಂತರ ಅಪಘಾತಗಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವ ಪರಿಣಾಮ ಈ ಮಾರ್ಗ ಅಪಘಾತಗಳ ತಾಣವಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ಹಾಗೂ ಗ್ರಾಮಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವಾರದ ಅವಧಿಯಲ್ಲಿ ಇದೇ ರಸ್ತೆಯಲ್ಲಿ 3ರಿಂದ 4 ಅಪಘಾತಗಳು ಸಂಭವಿಸಿರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.