ಹುಮನಾಬಾದ್ | ಭೀಮರಾವ್ ಪಾಟೀಲ್ಗೆ 2026ನೇ ಸಾಲಿನ ʻಬಸವ ಪುರಸ್ಕಾರ್-2026’ ಪ್ರಶಸ್ತಿ
ಹುಮನಾಬಾದ್: ಸಹಕಾರ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರನ್ನು ಬಸವ ಪರಿಷತ್, ಬೆಂಗಳೂರು ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ‘ಬಸವ ಪುರಸ್ಕಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಾ, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆ, ಸಮಾಜಮುಖಿ ಚಟುವಟಿಕೆಗಳಲ್ಲಿ ತೋರಿರುವ ಬದ್ಧತೆ ಹಾಗೂ ಜನಸೇವೆಯನ್ನು ಗುರುತಿಸಿ ಭೀಮರಾವ್ ಪಾಟೀಲ್ ಅವರಿಗೆ ಈ ಗೌರವ ಪ್ರದಾನ ಮಾಡಲಾಗುತ್ತಿದೆ.
ಅ.2ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪ್ಯಾಲೆಸ್ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಹಿಸಲಿದ್ದು, ಸಚಿವ ಲಕ್ಷ್ಮಣ್ ಸವದಿ, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಪಿ.ಜಿ.ಆರ್. ಸಿಂಧ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ಗಣ್ಯರನ್ನು ಗೌರವಿಸಲಾಗುತ್ತಿದ್ದು, ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಹಿರಿಯ ನಟ ಡಾ. ಶಿವರಾಜ್‌ಕುಮಾರ್ ಸೇರಿದಂತೆ ಹಲವು ಸಾಧಕರು 2026ನೇ ಸಾಲಿನ ‘ಬಸವ ಪುರಸ್ಕಾರ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬಸವಣ್ಣನವರ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಆಶಯದಡಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಬಸವ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.