ಹುಮನಾಬಾದ್ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಹುಮನಾಬಾದ್: ಕಬ್ಬಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂದು ಆರೋಪಿಸಿ, ಕಬ್ಬಿನ ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಐಬಿಯಿಂದ ಪ್ರಮುಖ ರಸ್ತೆಗಳ ಮೂಲಕ ಪ್ರತಿಭಟನಾ ರ್ಯಾಲಿ ನಡೆಸಿದ ರೈತರು, ಹಳೇ ಆರ್ಟಿಒ ಚೆಕ್ಪೋಸ್ಟ್ ಬಳಿ ಹಾದುಹೋಗುವ ಹೈದರಾಬಾದ್–ಮುಂಬೈ ರಾಷ್ಟ್ರೀಯ ಹೆದ್ದಾರಿ-69 ಅನ್ನು ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿನ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಹೆದ್ದಾರಿ ತಡೆಯಿಂದಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಪ್ರತಿ ಟನ್ ಕಬ್ಬಿಗೆ ನ್ಯಾಯಯುತ ಬೆಲೆ ಸಿಗುವಂತೆ ಎಫ್ಆರ್ಪಿ ದರವನ್ನು 5,000 ರೂ. ಗೆ ನಿಗದಿಪಡಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (ಎಂಎಸ್ಪಿ) 6,000 ರೂ. ನಿಗದಿಗೊಳಿಸಬೇಕು. ಬರಗಾಲ ಪೀಡಿತ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಪ್ರತಿ ಹೆಕ್ಟೇರ್ಗೆ 50,000 ರೂ. ಬರ ಪರಿಹಾರ ನೀಡಬೇಕು. ನೀರಾವರಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆಯಲ್ಲಿ 10 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು. 2026ನೇ ಸಾಲಿನಲ್ಲಿ ಬೆಳೆ ವಿಮೆ ಪಾವತಿಸಿರುವ ರೈತರ ಖಾತೆಗಳಿಗೆ ವಿಮೆ ಹಣವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾಡುಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ರೈತರಿಗೆ ಶೇ.90ರಷ್ಟು ರಿಯಾಯಿತಿಯಲ್ಲಿ ಸೋಲಾರ್ ಬೇಲಿಗಳನ್ನು ಅಳವಡಿಸಬೇಕು. ಸ್ವಾಮಿನಾಥನ್ ಆಯೋಗದ ವರದಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು, ಸಂಜೆವರೆಗೂ ಪ್ರತಿಭಟನೆ ಮುಂದುವರಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ರಸ್ತೆಯ ಬದಿಯಿಂದ ವಾಹನಗಳು ಸಂಚರಿಸಲು ವ್ಯವಸ್ಥೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸ್ಥಳಕ್ಕೆ ಆಗಮಿಸಿ ರೈತರ ಮನವಿ ಸ್ವೀಕರಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಜಿಲ್ಲಾಧಿಕಾರಿಗಳು ಒಂದು ವಾರದೊಳಗೆ ಕಂದಾಯ, ಜೆಸ್ಕಾಂ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ರೈತರ ಕುಂದುಕೊರತೆಗಳ ಕುರಿತು ಸಭೆ ನಡೆಸಬೇಕು. ಇಲ್ಲದಿದ್ದರೆ, ಮನ್ನಾಏಖೆಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಸೇರಿದಂತೆ ಜಿಲ್ಲೆಯ ಇತರ ಕಡೆಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಸ್ವಾಮಿ, ಯುವ ಕ್ರಾಂತಿ ಸಂಘಟನೆಯ ರಾಜ್ಯಾಧ್ಯಕ್ಷ ಗುಂಡು ರೆಡ್ಡಿ ಕಮಲಾಪುರೆ, ಜೈ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯದರ್ಶಿ ನವೀನ್ ಬತ್ತಲಿ, ಭೀಮರೆಡ್ಡಿ ಸಿಂಧನಕೇರಾ, ಅರವಿಂದ್ ಜೋಗಿರೆ ಹಾಗೂ ಅರುಣ್ ಕಲ್ಲೂರ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.