ಹುಮನಾಬಾದ್ | ಮುತ್ತಗಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
ಹುಮನಾಬಾದ್: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ತಳವಾರ ಸಮಾಜದ 17 ವರ್ಷದ ಅಪ್ರಾಪ್ತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆ ಮಾಡಿದ ಆರೋಪದ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಅಖಿಲ ಭಾರತೀಯ ಟೋಕರೆ ಕೋಳಿ ಸಮಾಜದ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ಶನಿವಾರ ತಹಸೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಮುತ್ತಗಿ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಕೃತ್ಯ ಇಡೀ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಇನ್ನೂ ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳನ್ನು ಕೂಡಲೇ ಬಂಧಿಸಿ, ಐವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಲ್ಲದೆ, ಮೃತ ಅಪ್ರಾಪ್ತ ಯುವತಿಯ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ಟೋಕರೆ ಕೋಳಿ ಸಮಾಜದ ಹುಮನಾಬಾದ್ ತಾಲೂಕು ಯುವ ಘಟಕದ ಅಧ್ಯಕ್ಷರು ದಯಾನಂದ್ ಮೇತ್ರಿ, ಉಪಾಧ್ಯಕ್ಷ ಸಿದ್ದಲಿಂಗ್ ಅಯ್ಯನೂರ್, ಪ್ರಧಾನ ಕಾರ್ಯದರ್ಶಿ ಲಖನ್ ಕೋಳಿವಾಡ್, ಜಿಲ್ಲಾಧ್ಯಕ್ಷರು ಅಶೋಕ್ ಕೋಳಿ ಹಣಕೋಣಿ, ಚಂದ್ರಕಾಂತ್ ಜಮಾದಾರ್ ಗೋರಂಪಳ್ಳಿ, ಶಂಕರ್ ಜಮಾದಾರ್, ಶರಣು ಎಕ್ಕೆಳಿ ಕಂದಗೋಳ್ ಹಾಗೂ ಅನಿಲ್ ಪಲ್ಲರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.