ಬೀದರ್: ಕನಕದಾಸರು ತಮ್ಮ ಕೀರ್ತನೆಗಳು, ಮುಂಡಿಗೆಗಳು ಮತ್ತು ಸಾಹಿತ್ಯದ ಮೂಲಕ ಸಮಾಜದಲ್ಲಿದ್ದ ಜಾತಿ, ಮತ ಹಾಗೂ ಭೇದಭಾವಗಳನ್ನು ಹೋಗಲಾಡಿಸಿ ಸಮಾನತೆಯ ಸಂದೇಶ ಸಾರಿದ ಮಹಾನ್ ದಾರ್ಶನಿಕರು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.

ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಭಕ್ತಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ಇಡೀ ಮನುಕುಲದ ಒಳಿತಿಗಾಗಿ ಶ್ರಮಿಸಿದ ಕನಕದಾಸರ ಮಾನವೀಯ ಮೌಲ್ಯಗಳು ಹಾಗೂ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವ ನೆಲೆಸಲು ಸಾಧ್ಯವಾಗುತ್ತದೆ ಎಂದರು.

ದೇವರು ಜಾತಿ ಅಥವಾ ಧರ್ಮವನ್ನು ನೋಡದೆ ಭಕ್ತಿಯನ್ನು ಮಾತ್ರ ಪರಿಗಣಿಸುತ್ತಾನೆ. ಪ್ರಾಣಿ-ಪಕ್ಷಿಗಳಲ್ಲಿ ಜಾತಿ ವ್ಯವಸ್ಥೆ ಇಲ್ಲದಿದ್ದರೂ, ಬುದ್ಧಿವಂತರೆನಿಸಿಕೊಂಡ ಮನುಷ್ಯರಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳೆನ್ನದೆ ಇಂದಿಗೂ ಜಾತಿ ವ್ಯವಸ್ಥೆ ಜೀವಂತವಾಗಿರುವುದು ವಿಷಾದನೀಯ. ವಿಶ್ವಗುರು ಬಸವಣ್ಣ ಮತ್ತು ಡಾ. ಬಾಬಾಸಾಹೇಬ ಅಂಬೇಡ್ಕರ್ ಸೇರಿದಂತೆ ಎಲ್ಲ ಮಹಾಪುರುಷರ ಸಮಾನತೆಯ ತತ್ವಗಳನ್ನು ಕೇವಲ ಜಯಂತಿಗಳಿಗೆ ಸೀಮಿತಗೊಳಿಸದೆ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಹೀಂ ಖಾನ್ ಮಾತನಾಡಿ, ಜಾತಿ-ಧರ್ಮದ ಆಧಾರದ ಮೇಲೆ ಕೆಲಸ ಮಾಡದೆ, ಎಲ್ಲರೂ ಸಮಾನರು ಎಂಬ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ವ್ಯಕ್ತಿಗೂ ಸಮಾಜಕ್ಕೂ ಒಳಿತಾಗುತ್ತದೆ. ಕನಕದಾಸರ ಮಾನವೀಯ ಮೌಲ್ಯಗಳು ಹಾಗೂ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ರವೀಂದ್ರ ಲಂಜವಾಡಕರ್ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮ್ಮಕೊಡೆ, ಬುಡಾ ಅಧ್ಯಕ್ಷ ವಿನೋದಕುಮಾರ್ ಅಪ್ಪೆ, ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸೂರ್ಯಕಾಂತ್ ಬಿರಾದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ಸಮಾಜದ ಮುಖಂಡರಾದ ಬಾಬುರಾವ್ ಮಲ್ಕಪೂರೆ, ಪಂಡಿತ್ ಚಿದ್ರೆ, ಮಲ್ಲಿಕಾರ್ಜುನ್ ಬಿರಾದಾರ್, ಸಚಿನ್ ಮಲ್ಕಪೂರೆ, ಮಾಳಪ್ಪ ಅಡಸಾರೆ ಹಾಗೂ ಸಂತೋಷ್ ಜೋಳದಾಪಕೆ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ