15ನೇ ಹಣಕಾಸು ಯೋಜನೆಯ ಹಣ ಬಿಡುಗಡೆ ಮಾಡದೆ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಈಶ್ವರ್ ಖಂಡ್ರೆ ಆರೋಪ
ಬೀದರ್: 15ನೇ ಹಣಕಾಸು ಯೋಜನೆಯಡಿ ಕರ್ನಾಟಕಕ್ಕೆ ಬರಬೇಕಿದ್ದ 2,186.2 ಕೋಟಿ ರೂ. ಅನುದಾನ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋರ ಅನ್ಯಾಯ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಆರೋಪಿಸಿದರು.
ಚಿಟಗುಪ್ಪದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆ ಮಾಡಿಲ್ಲ. ಕರ್ನಾಟಕ ಸರ್ಕಾರಕ್ಕೆ ಘೋರ ಅನ್ಯಾಯವಾಗಿದೆ. ರಾಜ್ಯಕ್ಕೆ 2,186.2 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕಾಗಿತ್ತು. ಆದರೆ, ಈವರೆಗೆ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
ಈ ಕುರಿತು ತಾನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಮುಖ್ಯಮಂತ್ರಿ ಕೂಡ ಪತ್ರ ಬರೆದಿದ್ದಾರೆ. ಬೇರೆ ಬೇರೆ ರಾಜ್ಯಗಳಿಗೆ ಅನುದಾನ ನೀಡಲಾಗಿದ್ದು, ಕರ್ನಾಟಕಕ್ಕೆ ಮಾತ್ರ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ ಅವರು, ಅಧಿಸೂಚನೆ ಪ್ರಕಟವಾದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರವಾಗಿದೆ ಎಂದರು.
ಚುನಾವಣಾ ಆಯೋಗವು ಈಗಿರುವ ಮತದಾರರ ಪಟ್ಟಿಯನ್ನು ಆಧರಿಸಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿಪಡಿಸಿರುವ ಸ್ಥಾನಗಳಿಗೆ ಅನುಗುಣವಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಿದೆ. ಬ್ಯಾಲೆಟ್ ಬಾಕ್ಸ್ ಸೇರಿದಂತೆ ಚುನಾವಣೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಒಂದು ತಿಂಗಳಿಂದ ಒಂದೂವರೆ ತಿಂಗಳ ಕಾಲಾವಕಾಶ ಬೇಕಾಗುತ್ತದೆ. ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿ, ಒಂದು ತಿಂಗಳ ಒಳಗಾಗಿ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದರು.
ಎಸ್ಐಆರ್ ಕುರಿತು ಪ್ರತಿಕ್ರಿಯಿಸಿದ ಅವರು, ಹಿಂದಿನ ಸರ್ಕಾರದ ಧೋರಣೆಯ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ. ಈ ವಿಷಯ ಸರ್ವೋಚ್ಚ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ಯಾವ ತೀರ್ಪು ನೀಡುತ್ತದೆ ಎಂಬುದನ್ನು ಕಾದು ನೋಡೋಣ ಎಂದರು.