×
Ad

ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ : ಸಚಿವ ಈಶ್ವರ್ ಖಂಡ್ರೆ

Update: 2025-12-30 19:54 IST

ಬೀದರ್ : ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.

ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ 'ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ರಾಜ್ಯದ 4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುವರು, ಅವರೇ ಇವಾಗ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ತಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಾಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ ಎಂದರು.

ಬೀದರ್‌ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 3,44,855 ಮಹಿಳೆಯರು ಫಲಾನುಭವಿಗಳು ಇದ್ದು, ಇದುವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ 2 ಸಾವಿರ ರೂ. ಅಂತೆ 1,552 ಕೋಟಿ ರೂ. ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,48,617 ಫಲಾನುಭವಿಗಳಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದ್ದು, 447 ಕೋಟಿ ರೂ. ಬಳಸಲಾಗಿದೆ. ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 13,13,355 ಜನರು ಫಲಾನುಭವಿಗಳಾಗಿದ್ದು, ಶೇ.80 ರಷ್ಟು ಜನರು ಒಳಗೊಂಡಿದ್ದಾರೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 11 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದಾಗಿ ಸರ್ಕಾರ ಕೆಎಸ್‌ಆರ್‌ಟಿಸಿಗೆ 315 ಕೋಟಿ ರೂ. ಪಾವತಿಸಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಾತನಾಡಿ, ರಾಜ್ಯದಲ್ಲಿ ತಮ್ಮ ಸರ್ಕಾರ ಜನಪರ, ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮೊದಲಿನಿಂದಲೂ ತಮ್ಮ ಸರ್ಕಾರ ಜನರು ಬದುಕು ಕಟ್ಟಿಕೊಳ್ಳುವಂತೆ ಮಾಡಿದೆ. ಉಳುವವನೇ ಭೂಮಿಯ ಒಡೆಯ, 20 ಅಂಶಗಳ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಯಾಗಿದ್ದು, ಶಿಕ್ಷಣ, ಆರೋಗ್ಯ, ವಿಜ್ಞಾನ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದರು.

ಹಿರಿಯ ಪತ್ರಕರ್ತ ಹಾಗೂ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಡಾ.ವಾಸು ಹೆಚ್. ವಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಮೈಸೂರು ವಿಭಾಗ) ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಕಲಬುರಗಿ ವಿಭಾಗ) ಉಪಾಧ್ಯಕ್ಷ ಎಸ್.ಆರ್.ಮೆಹರೂಜ್ ಖಾನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಬೆಂಗಳೂರು-1 ವಿಭಾಗ) ಉಪಾಧ್ಯಕ್ಷ ಸೂರಜ್ ಹೆಗಡೆ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಅಧ್ಯಕ್ಷ ಬಾಬು ಹೊನ್ನನಾಯ್ಕ್, ಬುಡಾ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ ಹಾಗೂ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ, ತಾಲೂಕು ಅಧ್ಯಕ್ಷರು, ಸದಸ್ಯರು, ಪಂಚ ಗ್ಯಾರಂಟಿಗಳ ಫಲಾನುಭವಿಗಳು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News