ಆ.2 ರಂದು ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ: ಅಮೃತರಾವ್ ಚಿಮಕೊಡೆ
ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ
ಬೀದರ್: ಆ.2 ರಂದು ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ ಹಾಗೂ ನೂತನ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭವೂ ಹಮ್ಮಿಕೊಳ್ಳಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಅಮೃತರಾವ್ ಚಿಮಕೊಡೆ ಅವರು ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2015ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಅಂದಿನ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯವಾದಿ ಎಚ್. ಕಾಂತರಾಜ ಅವರ ನೇತೃತ್ವದಲ್ಲಿ ಸಮೀಕ್ಷೆಗೆ ಆದೇಶಿಸಿತ್ತು. ಬಳಿಕ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಆ ವರದಿ ಜಾರಿಯಾಗದೆ ಉಳಿಯಿತು. 2023ರಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೊಸದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸುಧನ ನಾಯಕ್ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಸುವ ಜವಾಬ್ದಾರಿ ನೀಡಲಾಗಿದ್ದು, ಅದರ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದರು.
ಈ ವರದಿಯ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದೆ. ಹಾಗೆಯೇ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ಅಹಿಂದ ವರ್ಗದ ಸಂಘಟನೆಗಳು, ಶೋಷಿತ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಉಡುಪಿಯ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಅವರನ್ನು ಹಾಗೂ ಅವರ ಕುಟುಂಬವನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಹಾಗೆ ಮಾಡಲಾಗುವುದು ಎಂದು ಹೇಳಿಕೆ ನೀಡಿರುವುದಕ್ಕೆ ನಮ್ಮ ಖಂಡನೆ ಇದೆ. ಅವರ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಅವರ ಹೇಳಿಕೆ ವಿರುದ್ಧ ನಾವು ಎಸ್ಪಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಬೆಲ್ದಾರ್ ಅವರು ಮಾತನಾಡಿ, ಉಡುಪಿ ಶಾಸಕ ಯಶಪಾಲ ಸೂವರ್ಣ ಅವರ ಹೇಳಿಕೆ ಇಡೀ ಮಾನವ ಕುಲ ತಲೆ ತಗ್ಗಿಸುವಂತಾಗಿದೆ. ಇದರ ವಿರುದ್ಧ ಗೃಹ ಇಲಾಖೆ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಡಾ.ರಾಜಶೇಖರ್ ಸೇಡಂಕರ್, ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಗಿ, ಶೋಷಿತ ಸಮುದಾಯಗಳ ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ್ ಮಾಳಗೆ, ಶೋಷಿತ ಸಮುದಾಯಗಳ ಮುಖಂಡ ಸುನಿಲ್ ಖಾಶೆಂಪುರ್, ದೇವಿದಾಸ್ ತುಮಕುಂಟೆ, ಗೋವರ್ಧನ್ ರಾಠೋಡ್, ಒಬಿಸಿ ಆರ್ಮಿ ಅಧ್ಯಕ್ಷ ತಾನಾಜಿ ಸಗರ್, ಕಾರ್ಯಾಧ್ಯಕ್ಷ ರಾಜಕುಮಾರ್ ಟಿಳ್ಳೆಕರ್, ಗೊಂಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ್ ಚಿಮಕೊಡೆ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ್ ನೀಲಿಕಟ್ಟಿ ಸೇರಿದಂತೆ ಇತರರು ಇದ್ದರು.