ಆದಿ ಕರ್ಮಯೋಗಿ ಅಭಿಯಾನದಡಿ ವಿವಿಧ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ : ಸಂಸದ ಸಾಗರ್ ಖಂಡ್ರೆ
ಬೀದರ್ : ಆದಿ ಕರ್ಮಯೋಗಿ ಅಭಿಯಾನದಡಿ ಸರ್ಕಾರ ನೀಡುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ‘ಧರ್ತಿ ಆಭಾ ಜನಜಾತಿ ಗ್ರಾಮ ಉತ್ಕರ್ಷ’ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಅನೇಕ ಯೋಜನೆಗಳ ಬಗ್ಗೆ ಹಾಗೂ ತಮ್ಮ ವರ್ಗಗಳ ಅಭಿವೃದ್ಧಿಗಾಗಿ ಇರುವ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳುವಳಿಕೆ ಇಲ್ಲ. ಆದ್ದರಿಂದ ಅಧಿಕಾರಿಗಳು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನತೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಕೇಂದ್ರ ಸರ್ಕಾರವು 2024ರಲ್ಲಿ ಆದಿವಾಸಿ, ಬುಡಕಟ್ಟು, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಬೀದರ್ ಜಿಲ್ಲೆಯ ಒಟ್ಟು 196 ಗ್ರಾಮಗಳು ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು, ಔರಾದ್-72, ಹುಮನಾಬಾದ್-44, ಕಮಲನಗರ್-38, ಚೀಟಗುಪ್ಪಾ-31, ಬಸವಕಲ್ಯಾಣ-5, ಬೀದರ್-4 ಮತ್ತು ಭಾಲ್ಕಿ-2 ಗ್ರಾಮಗಳು ಸೇರಿವೆ ಎಂದು ತಿಳಿಸಿದರು.
ಈ ಯೋಜನೆಯಡಿ ಶಿಕ್ಷಣ, ಆರೋಗ್ಯ, ರಸ್ತೆ ಸಂಪರ್ಕ, ದೂರಸಂಪರ್ಕ, ಕುಡಿಯುವ ನೀರು, ವಸತಿ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸೇರಿ 29 ಅಂಶಗಳ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ಬರಲಿವೆ. ಪ್ರತಿ ಗ್ರಾಮಕ್ಕೂ ಗರಿಷ್ಠ 2 ಕೋಟಿ ರೂ. ಅನುದಾನ ನೀಡಲಾಗುತ್ತದೆ.
ಶಾಸಕರು, ಸ್ಥಳೀಯ ನಾಯಕರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರ ಮೂಲಕ ಕಾರ್ಯಕ್ರಮದ ಮಾಹಿತಿಯನ್ನು ತಲುಪಿಸಿ, ಕುಂದು ಕೊರತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಜೊತೆಗೆ ಅಧಿಕಾರಿಗಳು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿಗಳು, ತಾಲೂಕು ಪಂಚಾಯಿತಿ ಇಓಗಳು, ಪಿಡಿಒಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.