ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಗೆ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ
ಬಸವಕಲ್ಯಾಣ: ಜಿಲ್ಲೆಯ ಅತಿದೊಡ್ಡ ತಾಲೂಕಾಗಿರುವ ಬಸವಕಲ್ಯಾಣದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಲೋಕೇಶ್ ಮೋಳಕೆರೆ ಆಗ್ರಹಿಸಿದ್ದಾರೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಅಂಚೆ ಮೂಲಕ ಮನವಿ ಸಲ್ಲಿಸಿರುವ ಅವರು, ಬಸವಕಲ್ಯಾಣದಿಂದ ಜಿಲ್ಲಾ ಆಸ್ಪತ್ರೆ ಸುಮಾರು 100 ಕಿಲೋಮೀಟರ್ ದೂರದಲ್ಲಿರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಮಹಾರಾಷ್ಟ್ರದ ಉಮರ್ಗಾ, ಸೋಲಾಪುರ ಹಾಗೂ ಲಾತೂರ್‌ನ ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಸವಕಲ್ಯಾಣದ ಸಮೀಪ ರಾಷ್ಟ್ರೀಯ ಹೆದ್ದಾರಿ–65 ಹಾದು ಹೋಗುವುದರಿಂದ ಅಪಘಾತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುವ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಶಾಶ್ವತ ರಕ್ತ ಸಂಗ್ರಹ ಕೇಂದ್ರ (ಬ್ಲಡ್ ಸ್ಟೋರೇಜ್ ಸೆಂಟರ್) ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೆ, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗುವಂತೆ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಘಟಕ ಆರಂಭಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಸರ್ಕಾರವನ್ನು ಲೋಕೇಶ್ ಮೋಳಕೆರೆ ಆಗ್ರಹಿಸಿದ್ದಾರೆ.