ಬೀದರ್ : ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವುದರ ಜತೆಗೆ ಯುವಜನರಲ್ಲಿ ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನ. 26ರಂದು ಸಾಯಂಕಾಲ 5 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ‘ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ಉಳಿಸಿ’ ಘೋಷವಾಕ್ಯದಡಿ ಬೃಹತ್ ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅಂಬಾದಾಸ್ ಗಾಯಕವಾಡ್ ಅವರು ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಹಾಗೂ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಂವಿಧಾನ ಅಂಗೀಕಾರಗೊಂಡು 77 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಂವಿಧಾನ ದಿನಾಚರಣೆಯನ್ನು ಬೃಹತ್ ಜನಾಂದೋಲನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. 2008ರಿಂದ ಕರ್ನಾಟಕ ದಲಿತ ರಕ್ಷಣಾ ವೇದಿಕೆಯು ನಿರಂತರವಾಗಿ ಸಂವಿಧಾನ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ ಸುಮಾರು 10 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸಂವಿಧಾನ ಸಂರಕ್ಷಣಾ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್‌ ಬೆಲ್ದಾರ್ ಅವರು ಮಾತನಾಡಿ, ದೇಶದಲ್ಲಿ ಕೆಲವು ಜಾತೀಯವಾದಿ ಹಾಗೂ ಕೋಮುವಾದಿ ಶಕ್ತಿಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಜನಸಾಮಾನ್ಯರ ಹಕ್ಕುಗಳು ಹಾಗೂ ಪತ್ರಿಕಾ ಸ್ವಾತಂತ್ರ‍್ಯದ ಬಗ್ಗೆಯೂ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಸಿಜಿಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ನೇಹಾ ಬೋರಾ, ನೇಹಾಸಿಂಗ್ ರಾಥೋಡ್ ಸೇರಿದಂತೆ ರಾಷ್ಟ್ರಮಟ್ಟದ ಹೋರಾಟಗಾರರು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಅವರಿಂದ ಕಾರ್ಯಕ್ರಮ ಉದ್ಘಾಟಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸೂರ್ಯವಂಶಿ ವೆಂಕಟೇಶ್, ಗೌರವಾಧ್ಯಕ್ಷ ದೇವೇಂದ್ರ ರಾಮಚಂದ್ರ ಸೂರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು, ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರನ್ನು ಆಹ್ವಾನಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹುಮನಾಬಾದ್ ಮಾಜಿ ತಾ.ಪಂ ಅಧ್ಯಕ್ಷ ರಮೇಶ ಡಾಕುಳಗಿ ಮಾತನಾಡಿ, ಮಾಜಿ ನಗರ ಸಭೆ ಸದಸ್ಯ ಬಾಬುರಾವ್‌ ಪಾಸ್ವಾನ್, ಪ್ರದೀಪ ನಾಟೇಕರ್, ಶಿವಕುಮಾರ್‌ ನೀಲಿಕಟ್ಟಿ, ರಘುನಾಥ್‌ ಗಾಯಕ್ವಾಡ್, ಮುಕೇಶ್‌ ರಾಯ್, ಸುನಿಲ್‌ ಸಂಗಮ್‌, ಪ್ರಸನ್ನ ಡಾಂಗೆ, ಜನಾರ್ಧನ್ ದೀನೆ, ಅವಿನಾಶ್‌ ದೀನೆ, ಪುಟ್ಟರಾಜ್‌ ದೀನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor