ಎಲ್ಲಾ ವರ್ಗಕ್ಕೂ ನ್ಯಾಯ ಕಲ್ಪಿಸಿದ ನಮ್ಮ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿ : ಸಚಿವ ಈಶ್ವರ್ ಖಂಡ್ರೆ
ಬೀದರ್ : ನಮಗೆಲ್ಲರಿಗೂ ವಾಕ್ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ಮತದಾನದ ಹಕ್ಕು, ಗೌರವದಿಂದ ಬಾಳುವ ಹಕ್ಕು ನಮ್ಮ ಸಂವಿಧಾನ ನೀಡಿದೆ. ಸಮ ಸಮಾಜದ, ಸಾಮಾಜಿಕ ನ್ಯಾಯದ ಸ್ಪಷ್ಟ ಸಂದೇಶಗಳು ಸಂವಿಧಾನದಲ್ಲಿವೆ. ಶೋಷಿತರು, ದಲಿತರು, ವಂಚಿತರು, ದುರ್ಬಲರು, ಮಹಿಳೆಯರಿಗೂ ನ್ಯಾಯ ಕಲ್ಪಿಸಿರುವ ನಮ್ಮ ಸಂವಿಧಾನ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ.ಖಂಡ್ರೆ ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸ ದಿನದ ನಿಮಿತ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಈಶ್ವರ್ ಬಿ.ಖಂಡ್ರೆ, ಭಾರತದ ಸಂವಿಧಾನ ಹಲವು ವೈಶಿಷ್ಟ್ಯತೆಗಳಿಂದ ಕೂಡಿದೆ. ಇಷ್ಟು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಹೊಂದಿರುವ ಲಿಖಿತ ಸಂವಿಧಾನದಂತಹ ಯಾವುದೇ ಗೊಂದಲ ಅಸ್ಪಷ್ಟತೆ ಇಲ್ಲದ ಸಂವಿಧಾನ ಬೇರೆ ಯಾವ ರಾಷ್ಟ್ರದಲ್ಲಿ ಇಲ್ಲ ಎಂದರೆ ಅತಿಶಯೋಕ್ತಿಯಾಗಲಾರದು. ಇದಕ್ಕೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಶ್ರಮ ಕಾರಣವಾಗಿದೆ ಎಂದರು.
ಬೀದರ್ ಜಿಲ್ಲೆಯ ಅಸಮತೋಲನ ನಿವಾರಣೆ ಮಾಡಲು ಹೆಚ್ಚುವರಿ ಅನುದಾನದ ಅಗತ್ಯವಿದೆ. ಈ ಕಾರ್ಯವನ್ನು ನಮ್ಮ ಸರಕಾರ ಮಾಡುತ್ತಿದ್ದು, ಕಳೆದ ಏಪ್ರಿಲ್ ನಲ್ಲಿ ಮುಖ್ಯಮಂತ್ರಿಯವರು 2025 ಕೋಟಿ ರೂ. ವೆಚ್ಚದ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲೆಗೆ ಹೆಚ್ಚುವರಿ ಅನುದಾನ ಲಭಿಸುತ್ತಿದೆ ಎಂದು ಹೇಳಿದರು.
ನಮ್ಮ ಸರಕಾರ ನುಡಿದಂತೆ ನಡೆದಿದ್ದು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಹಣ ಹಂಚಿಕೆ ಮಾಡಿದೆ. ಕೇಂದ್ರ ಸರಕಾರದ ಉಡಾನ್ ಯೋಜನೆಯಡಿ ಅನುದಾನ ನಿಲ್ಲಿಸಿದ ಬಳಿಕ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ರಾಜ್ಯ ಸರ್ಕಾರವೇ 15 ಕೋಟಿ ರೂ. ಅನುದಾನ ನೀಡಿ ಮರು ಆರಂಭ ಮಾಡಿಸಿದೆ. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರವನ್ನೂ ಒಂದೇ ಪಥದಲ್ಲಿ ಒಗ್ಗೂಡಿಸುವ ಚಿಂತನೆ ನಡೆದಿದ್ದು, 500 ಕೋಟಿ ರೂ. ವೆಚ್ಚದಲ್ಲಿ 250 ಕಿ.ಮೀಟರ್ ಬಸವ ಪಥ ಎಂಬ ವರ್ತುಲ ರಸ್ತೆ (ರಿಂಗ್ ರೋಡ್) ಮಾಡುವ ಪ್ರಸ್ತಾವನೆ ನಾನು ಸರಕಾರದ ಮುಂದಿಟ್ಟಿದ್ದೇನೆ ಎಂದು ಮಾಹಿತಿ ನೀಡಿದರು.
ಈಗ 750 ಕೋಟಿರೂ. ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಿಸಲಾಗುತ್ತಿದೆ. ಈಗ ಶೇ. 70 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಶ್ರೀಘ್ರವೇ 10 ಎಕರೆ ಜಮೀನು ಹಸ್ತಾಂತರಗೊಳ್ಳಲಿದೆ. ಇದಕ್ಕೆ 5 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ನಗರದ ನೌಬಾದ್ ಸಮೀಪದ ರೇಷ್ಮೆ ಇಲಾಖೆಯ ಜಾಗದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಮಾರುತಿರಾವ್ ಮೂಳೆ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬುಡಾ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬೀದರ್ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.