×
Ad

ಬಸವಕಲ್ಯಾಣ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲು ಆಗ್ರಹಿಸಿ ಪ್ರತಿಭಟನೆ

Update: 2026-06-05 19:11 IST

ಬಸವಕಲ್ಯಾಣ: ತಾಲೂಕಿನ ಉಮ್ಮಾಪುರ ಹಾಗೂ ಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಕಾಂಬಳೆ ವಾಡಿ ನಿವಾಸಿ ಮಹಾದೇವ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ಶುಕ್ರವಾರ ಬಸವಕಲ್ಯಾಣದಲ್ಲಿ ಪ್ರತಿಭಟನೆ ನಡೆಯಿತು.

ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು, ಬಸವಕಲ್ಯಾಣ ತಹಸೀಲ್ದಾರ್ ದತ್ತಾತ್ರೇಯ ಜೆ. ಗಾದಾ ಹಾಗೂ ಹುಲಸೂರ್ ತಹಸೀಲ್ದಾರ್ ಅವರಿಂದ ನಿರಂತರ ಒತ್ತಡ ಮತ್ತು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದರು.

ಮಹಾದೇವ್ ಅವರು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಶೇ.50ರಷ್ಟು ಪ್ರಗತಿ ಸಾಧಿಸಿದ್ದರೂ ಪ್ರತಿದಿನ 10 ಪ್ರಕರಣಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಒತ್ತಡ ಹೇರಲಾಗುತ್ತಿತ್ತು. ಗುರಿ ತಲುಪದಿದ್ದರೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಅಮಾನತು ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿತ್ತು ಎಂದು ಪ್ರತಿಭಟನಾಕಾರರು ದೂರಿದರು.

ಅವೈಜ್ಞಾನಿಕ ಗುರಿ ನಿಗದಿ, ರಾತ್ರಿ 9 ಗಂಟೆಯವರೆಗೂ ಸಭೆ ನಡೆಸುವುದು ಹಾಗೂ ಅಧಿಕಾರಿಗಳ ಮೇಲೆ ಮಾನಸಿಕ ಒತ್ತಡ ಹೇರಿರುವುದೇ ಮಹಾದೇವ್ ಅವರ ಸಾವಿಗೆ ಕಾರಣವಾಗಿದೆ. ಹೀಗಾಗಿ ತಹಸೀಲ್ದಾರ್ ದತ್ತಾತ್ರೇಯ ಗಾದಾ ಅವರನ್ನು ತಕ್ಷಣ ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸದಿರುವುದರ ವಿರುದ್ಧವೂ ಆಕ್ರೋಶ ವ್ಯಕ್ತವಾಯಿತು. ಮೃತ ಮಹಾದೇವ್ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಜಿಲ್ಲಾಧಿಕಾರಿಗಳು, ನ್ಯಾಯಕ್ಕಾಗಿ ನಡೆಯುತ್ತಿರುವ ಪ್ರತಿಭಟನೆಗೆ ಆಗಮಿಸದಿರುವುದು ಬೇಸರದ ಸಂಗತಿ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News