ಬೀದರ್ : ಇತ್ತೀಚಿನ ದಿನಗಳಲ್ಲಿ ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ಜನಜಾಗೃತಿಯ ಮೂಲಕ ತಡೆಗಟ್ಟುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆ, ಪೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಲ್ಲಿ ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯ ಹೇಳಿದರು.

ನಗರದ ಸರಸ್ವತಿ ಶಿಕ್ಷಣ ವಿಕಾಸ ಸಮಿತಿಯ ಗಿರಿಜಾ ಸಭಾ ಮಂಟಪದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಶಿಕ್ಷಣ ವಿಕಾಸ ಸಮಿತಿಯ ಸಂಯುಕ್ತಾಶ್ರಯದಲ್ಲಿ ‘ಸುರಕ್ಷಿತ್ ಬಚಪನ್ ಅಭಿಯಾನ’ದ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಮೊಬೈಲ್ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ಡಾರ್ಕ್‌ ವೆಬ್‌ನಂತಹ ಅಪಾಯಕಾರಿ ಅಂತರ್ಜಾಲ ತಾಣಗಳಿಂದ ದೂರವಿರಬೇಕು. ಮಕ್ಕಳಲ್ಲಿ ಧನಾತ್ಮಕ ಚಿಂತನೆ ಬೆಳೆಸುವ ಮೂಲಕ ಅವರ ಸುರಕ್ಷತೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಭಾರತದ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಜಗತ್ತಿಗೆ ಮಾದರಿಯಾಗಿದ್ದು, ಅವುಗಳಲ್ಲಿರುವ ನೈತಿಕ ಮೌಲ್ಯಗಳನ್ನು ಮಕ್ಕಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳು ಮಕ್ಕಳಿಗೆ ಪಿತೃವಚನ ಪಾಲನೆ, ಸಹೋದರತ್ವ, ಸ್ನೇಹ, ತ್ಯಾಗ ಹಾಗೂ ಅಹಂಕಾರದಿಂದ ಉಂಟಾಗುವ ವಿನಾಶದಂತಹ ಮಹತ್ವದ ಜೀವನಪಾಠಗಳನ್ನು ಕಲಿಸುತ್ತವೆ. ಮಕ್ಕಳ ಭವಿಷ್ಯ ಉತ್ತಮವಾಗಬೇಕಾದರೆ ಅವರಿಗೆ ಬಾಲ್ಯದಿಂದಲೇ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನವೀಯ ಮೌಲ್ಯ ಬೆಳೆಸುವ ವಾತಾವರಣ ಕಲ್ಪಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಬಸವಂತರಾಯ್‌ ಜಿಡ್ಡೆ ಅವರು ಮಾತನಾಡಿ, ಭಾರತದ ಯುವಶಕ್ತಿಯೇ ದೇಶದ ಭವಿಷ್ಯದ ಚೇತನವಾಗಿದೆ. ಸ್ವಾಮಿ ವಿವೇಕಾನಂದರ ಆಶಯದಂತೆ ರಾಷ್ಟ್ರ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಮಹತ್ವದ್ದಾಗಿದೆ. ಎಲ್ಲ ಸಂಪತ್ತುಗಳಿಗಿಂತ ಜ್ಞಾನ ಸಂಪತ್ತು ಶ್ರೇಷ್ಠವಾಗಿದ್ದು, ಇಂದಿನ ಮಕ್ಕಳು ನಾಳಿನ ಉತ್ತಮ ನಾಗರಿಕರಾಗಬೇಕು. ಜ್ಞಾನ, ವೈರಾಗ್ಯ ಹಾಗೂ ವಿವೇಕವನ್ನು ಬೆಳೆಸಿಕೊಳ್ಳುವ ಮೂಲಕ ಜೀವನದಲ್ಲಿ ಉನ್ನತ ಗುರಿ ಸಾಧಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸರಸ್ವತಿ ಶಿಕ್ಷಣ ವಿಕಾಸ ಸಮಿತಿಯ ಅಧ್ಯಕ್ಷ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬೀದರ್‌ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್‌ ಪಾಟೀಲ್‌, ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕ ಜಾಕಿರ್‌ ಹುಸೇನ್‌, ಕ್ಷೇತ್ರ ಸಮನ್ವಯಾಧಿಕಾರಿ ತಾನಾಜಿ ಕಾರಬಾರಿ, ಶಿಕ್ಷಣ ಸಂಯೋಜಕ ಹೈದರ್‌ ಅಲಿ ಸೌದಾಗರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯೆ ಪ್ರತಿಮಾ ಚಾಮಾ ಅವರು ಸ್ವಾಗತಿಸಿದರು. ಶಿಕ್ಷಕ ಬಾಲಾಜಿ ರಾಠೋಡ್‌ ನಿರೂಪಿಸಿದರು. ಶಿಕ್ಷಕಿ ಉಜ್ವಲಾ ಶರ್ಮಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor