ಪಠ್ಯದ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು : ಸಚಿವ ಈಶ್ವರ್ ಖಂಡ್ರೆ
ಬೀದರ್ : ಕ್ರೀಡೆಗಳು ಪ್ರತಿ ಮನುಷ್ಯನ ಅವಿಭಾಜ್ಯ ಅಂಗ. ಅದರಲ್ಲೂ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗೂ ಮಹತ್ವ ನೀಡುವ ಮೂಲಕ ತಮ್ಮ ಪ್ರತಿಭೆ ಮೆರೆಯಬೇಕು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.
ಇಂದು ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ 14ರಿಂದ 17 ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಬರಿ ಪುಸ್ತಕದ ಹುಳು ಆಗದೇ ತಮಗೆ ಆಸ್ತಕಿ ಇರುವ ಆಟಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಜಗತ್ತಿಗೆ ತೋರಿಸಬೇಕು. ಆಟಗಳಲ್ಲಿ ಸೋಲು, ಗೆಲವು ಇರುತ್ತದೆ. ಸೋತವರು ಯಾವುದೇ ಕಾರಣಕ್ಕೂ ಹಿಂಜರಿಕೆಗೆ ಒಳಗಾಗದೇ ಸೋಲೇ ಗೆಲುವಿನ ಮೆಟ್ಟಿಲು ಎಂದು ಭಾವಿಸಿ ಮತ್ತೇ ಪ್ರಯತ್ನ ಮಾಡಿದರೇ, ಗೆಲುವು ನಿಮ್ಮದಾಗುತ್ತದೆ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ ಎಂದು ಪ್ರೋತ್ಸಾಹದ ಮಾತುಗಳಾಡಿದರು.
ಈ ಪಂದ್ಯಾವಳಿಯಲ್ಲಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಯ 500 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹೆಚ್.ಜಿ. ಸುರೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಎ.ಮುನಾಫ್ ಮತ್ತು ದೈಹಿಕ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.