ಎಸೆಸೆಲ್ಸಿ ಫಲಿತಾಂಶ : ಬೀದರ್ ಜಿಲ್ಲೆಯ ಸಾಧನೆಗೆ ಈಶ್ವರ್ ಖಂಡ್ರೆ ಅಭಿನಂದನೆ
ಬೀದರ್ : ಶೈಕ್ಷಣಿಕ ಜೀವನದ ಮಹತ್ವದ ಹಂತವಾದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯು ಶೇ.92.17ರಷ್ಟು ಫಲಿತಾಂಶ ದಾಖಲಿಸಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.
ಕಳೆದ ಬಾರಿ ಶೇ.73.35ರಷ್ಟು ಫಲಿತಾಂಶ ಪಡೆದಿದ್ದ ಜಿಲ್ಲೆ, ಈ ಬಾರಿ ಗಮನಾರ್ಹ ಏರಿಕೆ ಕಂಡಿದೆ. ಆದಾಗ್ಯೂ ಜಿಲ್ಲಾವಾರು ಫಲಿತಾಂಶದಲ್ಲಿ 28ನೇ ಸ್ಥಾನ ಪಡೆದಿದೆ. ಮುಂದಿನ ವರ್ಷ ಜಿಲ್ಲೆ ಅಗ್ರ 10ರಲ್ಲಿ ಸ್ಥಾನ ಪಡೆಯುವಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಬೀದರ್ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಗುರುತಿನಿಂದ ಹೊರಬರಲು ಇದು ಒಂದು ಉತ್ತಮ ಆರಂಭ. ಇನ್ನೂ ಹೆಚ್ಚಿನ ಸಾಧನೆ ಸಾಧ್ಯವಾಗಬೇಕಿದ್ದು, ಉಪನ್ಯಾಸಕರು ಹಾಗೂ ಶಿಕ್ಷಕರು ನಿಸ್ವಾರ್ಥ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು ಎಂದು ಸಲಹೆ ನೀಡಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಶರಾಗಬಾರದು. ಪೂರಕ ಪರೀಕ್ಷೆಗೆ ಸಿದ್ಧತೆ ನಡೆಸಿ, ಅದರಲ್ಲಿ ಉತ್ತೀರ್ಣರಾಗಿ ತಮ್ಮ ಶಿಕ್ಷಣವನ್ನು ಮುಂದುವರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.