ಬೀದರ್: ಜಿಲ್ಲೆಯಲ್ಲಿ ಎದುರಾಗಿರುವ ತೀವ್ರ ಬರಗಾಲದಿಂದಾಗಿ ಹೆಸರು, ಉದ್ದು, ಸೋಯಾ ಹಾಗೂ ತೊಗರಿ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಂಕಷ್ಟದಲ್ಲಿರುವ ಅರ್ಹ ರೈತರಿಗೆ ತಕ್ಷಣವೇ ಬೆಳೆ ವಿಮೆ ಪರಿಹಾರ ಜಮೆ ಮಾಡುವಂತೆ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ರೈತರ ಹಿತಾಸಕ್ತಿ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ. ಪರಿಹಾರ ನೀಡಲು ವಿಳಂಬ ಅಥವಾ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಕಂಪನಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ, ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಯೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬರಗಾಲ ಎದುರಿಸಲು ಜಿಲ್ಲೆಗೆ ಈಗಾಗಲೇ 10 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ತೊಂದರೆ ಕಂಡುಬಂದ ತಕ್ಷಣ ಟ್ಯಾಂಕರ್‌ಗಳ ಮೂಲಕ, ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಅಥವಾ ಹೊಸ ಬೋರ್‌ವೆಲ್‌ಗಳನ್ನು ಕೊರೆಸುವ ಮೂಲಕ ಸಾರ್ವಜನಿಕರಿಗೆ ತಕ್ಷಣ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಮಳೆಯ ವೈಫಲ್ಯದಿಂದ ಎದುರಾಗಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.

ಜಿಲ್ಲೆಯ ರೈತರಿಗೆ ದಿನಕ್ಕೆ ಏಳು ಗಂಟೆಗಳ ಕಾಲ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ಯಾವುದೇ ಲೈನ್‌ಮನ್ ಬೇರೆಯವರಿಂದ ವಿದ್ಯುತ್ ಕಂಬ ಹತ್ತಿಸುವಂತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಬಾಗಿದ ಕಂಬಗಳು ಹಾಗೂ ಜೋತುಬಿದ್ದ ವಿದ್ಯುತ್ ತಂತಿಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ವಿದ್ಯುತ್ ತಗುಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ತಮ್ಮ ಕ್ಷೇತ್ರದ ರೈತರು ಮೇವಿನ ಕೊರತೆ ಎದುರಿಸುತ್ತಿದ್ದಾರೆ. ಪಶುವೈದ್ಯಕೀಯ ಆಸ್ಪತ್ರೆಗಳಲ್ಲಿ ಔಷಧಗಳು ಲಭ್ಯವಾಗುತ್ತಿಲ್ಲ. ತಮ್ಮ ಕ್ಷೇತ್ರದ ಒಂಬತ್ತು ಹಳ್ಳಿಗಳು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬಂದಿದ್ದರೂ ಅಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಗದಲ್ ಸೇತುವೆ ಶಿಥಿಲಗೊಂಡಿದೆ. ಮಾಂಜಾ ದಾರದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಬ್ರಿಮ್ಸ್‌ನಲ್ಲಿರುವ ಕ್ಯಾತ್ ಲ್ಯಾಬ್ ಆರಂಭಿಸಬೇಕು. ಬಸ್ ಸಂಚಾರದ ಸಮಸ್ಯೆ ಸೇರಿದಂತೆ ಹಲವು ವಿಷಯಗಳನ್ನು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ಮಾತನಾಡಿ, ರೈತರ ಜೀವನಾಡಿಯಾದ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಪುನರಾರಂಭಿಸಬೇಕು. ಹುಮನಾಬಾದ್‌ನಲ್ಲಿರುವ ಹಲವು ರಾಸಾಯನಿಕ ಕಾರ್ಖಾನೆಗಳಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಮ್ಮ ತಾಲೂಕಿನಲ್ಲಿ ಒಬ್ಬ ಗುತ್ತಿಗೆದಾರನಿಗೆ 150 ಕೋಟಿ ರೂ. ಮೊತ್ತದ ಕಾಮಗಾರಿಗಳ ಟೆಂಡರ್ ನೀಡಲಾಗಿದೆ. ಆದರೆ, ಆ ಗುತ್ತಿಗೆದಾರ ಎಲ್ಲಿಯೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಆದರೂ ಮತ್ತೆ ಆತನಿಗೆ ಟೆಂಡರ್ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಸಾಯನಿಕ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪಿಜಿಆರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಸೂಚಿಸಿದರು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಗುತ್ತಿಗೆದಾರನ ಬಿಲ್ ಪಾವತಿಸಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಿಎಸ್‌ಎಸ್‌ಕೆ ಕಾರ್ಖಾನೆಯ ಪುನರಾರಂಭಕ್ಕೂ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಸಂಸದ ಸಾಗರ ಖಂಡ್ರೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಗಳ ಬಳಿ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಮನ್ನಾಖೇಳಿಯಲ್ಲಿ ಸ್ಥಳೀಯ ಸಂಸ್ಥೆಯಿಂದ ನಿರ್ಮಿಸಲಾದ ಅಂಗಡಿಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿ, ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪಘಾತ ತಡೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹಾಗೂ ಮನ್ನಾಖೇಳಿಯಲ್ಲಿನ ಅಕ್ರಮದ ಕುರಿತು ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಪ್ರಭು ಚವ್ಹಾಣ ಮಾತನಾಡಿ, ಔರಾದ್ ಪುರಸಭೆಯಲ್ಲಿ ಖಾಯಂ ಅಧಿಕಾರಿ ಇಲ್ಲದ ಕಾರಣ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿವೆ. ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ಕಾರಂಜಾದಿಂದ ಕೆರೆ ತುಂಬಿಸುವ ಯೋಜನೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಮ್ ಖಾನ್ ಮಾತನಾಡಿ, ಬೀದರ್ ನಗರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. ಹಲವೆಡೆ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿದ್ದರೂ ಅವುಗಳ ನಿರ್ವಹಣೆಗೆ ಯಾರೂ ಇಲ್ಲದಂತಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಬೀದಿ ದೀಪಗಳ ವ್ಯವಸ್ಥೆಯೂ ಇಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪೈಪ್‌ಲೈನ್ ನಿರ್ವಹಣೆಯ ಜವಾಬ್ದಾರಿಯನ್ನು ಯಾರಿಗಾದರೂ ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬೀದಿ ದೀಪಗಳ ಅವಶ್ಯಕತೆ ಇರುವ ಎಲ್ಲ ಕಡೆ ಅವುಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಖಂಡ್ರೆ, ಬೀದರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಂದೀಪ್ ಡಿ., ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor