ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ : ಶಾಸಕ ಪ್ರಭು ಚೌವ್ಹಾಣ್
ಔರಾದ್ : ಐದು ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಹಾಮಾರಿ ಪೋಲಿಯೋ ಮರಳಿ ಬಾರದಂತೆ ಪೋಷಕರು ಜಾಗೃತಿ ವಹಿಸಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ತಿಳಿಸಿದರು.
ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿನ ಗೃಹ ಕಚೇರಿಯಲ್ಲಿ ರವಿವಾರ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಪಲ್ಸ್ ಪೋಲಿಯೋ ಪ್ರಮುಖ ಪಾತ್ರ ವಹಿಸುತ್ತಿದೆ. ದೇಶದ ಆರೋಗ್ಯ ಕ್ಷೇತ್ರದಲ್ಲಿ ಪೋಲಿಯೋ ಕಾರ್ಯಕ್ರಮ ಕ್ರಾಂತಿಕಾರಕ ಬದಲಾವಣೆ ತಂದಿದೆ. ಈಗಾಗಲೇ ಭಾರತ ಪೋಲಿಯೋ ಮುಕ್ತ ರಾಷ್ಟ್ರವೆಂಬ ಹೆಗ್ಗಳಿಕೆ ಹೊಂದಿದೆ. ಆದರೂ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಪೋಲಿಯೋ ರೋಗ ಇನ್ನೂ ಜೀವಂತ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗಾಗಿ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯವಶ್ಯಕವಿದೆ ಎಂದರು.
ಪೋಲಿಯೋ ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ. ಹಾಗಾಗಿ ಪೋಷಕರು ನಿರ್ಭಯವಾಗಿ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದ ಅವರು, ಪ್ರತಿ ಗ್ರಾಮಗಳಲ್ಲಿ ಯಾವೊಬ್ಬ ಮಗುವು ಲಸಿಕೆಯಿಂದ ವಂಚಿತಗೊಳ್ಳದಂತೆ ನೋಡಿಕೊಳ್ಳಬೇಕು. ಅಲೆಮಾರಿ ಸಮುದಾಯಗಳು ಇರುವ ಪ್ರದೇಶಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ ಹಾಗೂ ಮೆಡಿಕಲ್ ಆಫಿಸರ್ ಡಾ.ಅಮಿತ್ ಪಾಲ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.