ಔರಾದ್ ತಾಲೂಕಿನ ಗ್ರಾಮೀಣ ಭಾಗದಲ್ಲಿ ಜಿಪಂ ಸಿಇಒ ಭೇಟಿ : ಪರಿಶೀಲನೆ
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಆರೋಗ್ಯ ಸೇವೆಗಳಿಗೆ ಆದ್ಯತೆ ನೀಡಿ: ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಔರಾದ್: ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಗುರುವಾರ ಭೇಟಿ ನೀಡಿ, ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆಗಳು ಹಾಗೂ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ತಾಲೂಕಿನ ಧೂಪತಮಹಾಗಾಂವ್, ಚಟ್ನಾಳ್, ಸಂತಪೂರ್ ಹಾಗೂ ಹೆಡಗಾಪುರ್ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳು, ಗ್ರಾಮ ಗ್ರಂಥಾಲಯ, ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯಗಳು ಸಮರ್ಪಕವಾಗಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಧೂಪತಮಹಾಗಾಂವ್ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಅವರು, ಕುಡಿಯುವ ನೀರಿನ ವ್ಯವಸ್ಥೆಯ ಕುರಿತು ಮಾಹಿತಿ ಪಡೆದರು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಜನರಿಗೆ ನಿರಂತರವಾಗಿ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ (ಪಿಡಿಒ) ಸೂಚಿಸಿದರು.
ಬಳಿಕ ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಟ್ನಾಳ್ ಗ್ರಾಮದಲ್ಲಿ ಮನೆಮನೆಗೆ ಭೇಟಿ ನೀಡಿ, ಕುಡಿಯುವ ನೀರಿನ ನಳಗಳ ಸ್ಥಿತಿಯನ್ನು ಪರಿಶೀಲಿಸಿದರು. ನೀರು ಸಂಗ್ರಹಣಾ ಟ್ಯಾಂಕ್ನ ಒಳಭಾಗದ ಸ್ವಚ್ಛತೆಯನ್ನೂ ವೀಕ್ಷಿಸಿದರು. ಟ್ಯಾಂಕ್ ಅನ್ನು ಸಮರ್ಪಕವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ವಿಬಿ-ಜಿ ರಾಮ್ ಜಿ ಯೋಜನೆಯಡಿ ಚಟ್ನಾಳ್ ಗ್ರಾಮದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಂಟೂರ್ ಟ್ರೆಂಚ್ (ಸಿಸಿಟಿ) ಕಾಮಗಾರಿಯನ್ನು ಪರಿಶೀಲಿಸಿದ ಅವರು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕರೊಂದಿಗೆ ಕಾಮಗಾರಿಯ ಕುರಿತು ಚರ್ಚಿಸಿದರು. ಬಳಿಕ ಸಂತಪೂರ್ ಗ್ರಾಮದಲ್ಲಿ ನಡೆಯುತ್ತಿರುವ ತಿರುಗಾಲುವೆ ಕಾಮಗಾರಿಯನ್ನು ವೀಕ್ಷಿಸಿದರು. ಕಾರ್ಮಿಕರಿಗೆ ನಿಯಮಿತವಾಗಿ ಕೆಲಸ ದೊರೆಯುತ್ತಿದೆಯೇ ಹಾಗೂ ಕೂಲಿ ಹಣ ಸಕಾಲಕ್ಕೆ ಪಾವತಿಯಾಗುತ್ತಿದೆಯೇ ಎಂಬುದರ ಕುರಿತು ವಿಚಾರಿಸಿದರು.
ಹೆಡಗಾಪುರದಲ್ಲಿರುವ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಸಿಇಒ, ಅಲ್ಲಿನ ಕಾಮಗಾರಿಯನ್ನು ಪರಿಶೀಲಿಸಿದರು. ಜಾನುವಾರು ಹಾಗೂ ಕೋಳಿ ಸಂವರ್ಧನಾ ಕೇಂದ್ರದ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದರು. ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ, ಆರೋಗ್ಯ ಸೇವೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಡಾ. ಗೌತಮ್ ಅರಳಿ, ಎಇಇ ಮಾರುತಿ ರಾಠೋಡ್, ಟಿಎಚ್ಒ ಡಾ. ಅನಿಲಕುಮಾರ್ ಎಕಲಾರೆ, ಎಡಿ ಉತ್ತಮ್, ತುಕಾರಾಮ್, ಪಿಡಿಒಗಳಾದ ಸಂತೋಷ್ ಪಾಟೀಲ್, ನಾಗೇಶ್ ಮುಕ್ರಂಬೆ, ಶರಣಪ್ಪ ಗಂದಗೆ, ನಂದಕುಮಾರ್ ಶಾಸ್ತ್ರೀ, ತಾಪಂ ಟಿಸಿ ಆನಂದ್ ಕಾಳಗಾಪೂರೆ, ಟಿಎ ಸಂದೀಪ್, ಶರಣಪ್ಪ, ಪರಮೇಶ್ವರ್ ಹಾಗೂ ಟಿಐಇಸಿ ಅಂಬಾದಾಸ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.