×
Ad

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೈಕ್‌ಗೆ ಢಿಕ್ಕಿ ಹೊಡೆದು ಬೆಂಕಿಗಾಹುತಿ ; ಕನಿಷ್ಠ 11 ಮಂದಿ ಸಜೀವ ದಹನ

ಆಂಧ್ರಪ್ರದೇಶದ ಕರ್ನೂಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತ

Update: 2025-10-24 07:39 IST

PC: x.com/sudhirjourno

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್‌ ಬಳಿ ಶುಕ್ರವಾರ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಂಕಿಗಾಹುತಿಯಾಗಿ ಕನಿಷ್ಠ 11 ಜನರು ಸಜೀವ ದಹನವಾದ ಘಟನೆ ನಡೆದಿದೆ.

ಬೆಳಗಿನ ಜಾವ ಸುಮಾರು 3.30ರ ಸಮಯದಲ್ಲಿ ಖಾಸಗಿ ಬಸ್‌ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿ, ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರವಾಗಿ ಹರಡಿದ ಪರಿಣಾಮ ಇಡೀ ಬಸ್‌ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇವರಲ್ಲಿ 18 ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದ್ದು, ಕನಿಷ್ಠ 11 ಮಂದಿ ಪ್ರಯಾಣಿಕರು ಬೆಂಕಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರ ಮೃತದೇಹ ಸಂಪೂರ್ಣವಾಗಿ ಸುಟ್ಟುಹೋಗಿರುವುದರಿಂದ ಗುರುತಿಸಲು ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ಆ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಡಿಮೆ ಗೋಚರತೆಯ ಕಾರಣದಿಂದಲೇ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ಅನೇಕ ಜೀವಗಳು ಅದಾಗಲೇ ಬೆಂದು ಹೋಗಿದ್ದವು ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ದುರಂತದ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. “ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್‌ ಬಳಿ ಸಂಭವಿಸಿದ ಬಸ್‌ ಬೆಂಕಿ ಅಪಘಾತದ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಅಗತ್ಯ ಸಹಾಯ ನೀಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News