ಚಾಮರಾಜನಗರ | ಜೀವ ಬೆದರಿಕೆ, ಜಾತಿ ನಿಂದನೆ ಆರೋಪ; 17 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು
ಚಾಮರಾಜನಗರ : ಶಾಂತಿ ಸಭೆಯಲ್ಲಿ ಅಶಾಂತಿ ಮೂಡಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ 17 ಮಂದಿಯ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಶಿವಕುಮಾರ್ ನೀಡಿದ ದೂರಿನನ್ವಯ ಗುಂಡ್ಲುಪೇಟೆ ಪೊಲೀಸರು ವೀರನಪುರ ಗ್ರಾಮದ 17 ಮಂದಿಯ ಮೇಲೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಪ್ರಕರಣ ದಾಖಲಿಸಿದ್ದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಸಿದ್ದಪ್ಪಾಜಿ ಹಾಗೂ ಶ್ರೀ ಮಾರಮ್ಮ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ನೀಡದೇ ಇರುವ ಬಗ್ಗೆ ಹಾಗೂ ದೇವಾಲಯಗಳ ಆಸ್ತಿಗಳ ಹರಾಜು ಹಾಕದೇ ಕೇವಲ ಒಂದು ಸಮುದಾಯದವರು ಅದನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಗ್ರಾಮದ 17 ಮಂದಿ ಜಾತಿ ನಿಂದನೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಹಾಗೂ ಪ್ರಾಣ ಬೆದರಿಕೆ ಪ್ರಕರಣ ದಾಖಲಾಗುತ್ತಿದ್ದಂತೆ ವೀರನಪುರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ದಲಿತ ಸಮುದಾಯದವರು ಸುಳ್ಳು ದೂರು ನೀಡಿದ್ದಾರೆ, ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ವಾದಿಸಿ, ನ್ಯಾಯ ಸಿಗದಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಇದೀಗ ಪೊಲೀಸರು ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.