Chamarajanagara | ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಮೃತ್ಯು
ಚಾಮರಾಜನಗರ /ಹನೂರು: ಕಾಡಾನೆ ದಾಳಿ ನಡೆಸಿದ್ದರಿಂದ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಪೊನ್ನಾಚಿ ಅರಣ್ಯ ವಲಯದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಲೆಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ ಮಹದೇವಸ್ವಾಮಿ (48) ಮೃತಪಟ್ಟವರು. ಇವರು ಮಲೆಮಹದೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಫಾರೆಸ್ಟ್ ವಾಚರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶನಿವಾರ ತಡರಾತ್ರಿ ಪೊನ್ನಾಚಿ ಅರಣ್ಯ ವಲಯದ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆನೆ ದಾಳಿಗೆ ಒಳಗಾಗಿ ಮಹದೇವಸ್ವಾಮಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.