×
Ad

ಹನೂರು | ಯುವಕನ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ

Update: 2026-01-22 22:44 IST

ಹನೂರು: ತಾಲೂಕಿನ ಮಲೆಮಹದೇಶ್ವರಬೆಟ್ಟ ತಪ್ಪಲಿನಲ್ಲಿ ಯುವಕನ ಸಾವಿಗೆ ಕಾರಣವಾಗಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ.

ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬ ಯುವಕ ಕಾಲ್ನಡಿಗೆಯಲ್ಲಿ ಮಹದೇಶ್ವರಬೆಟ್ಟಕ್ಕೆ ತೆರಳುತ್ತಿದ್ದಾಗ ಚಿರತೆ ದಾಳಿಗೆ ಬಲಿಯಾಗಿದ್ದರು.

ಚಿರತೆ ಸೆರೆಗೆ ಸಾರ್ವಜನಿಕರಿಂದ ತೀವ್ರ ಒತ್ತಡ ಕೇಳಿ ಬಂದಿತ್ತು. ಚಿರತೆ ಸೆರೆಗೆ ಅರಣ್ಯ ಇಲಾಖೆ ಸತತ ನಿಗಾ ವಹಿಸಿತ್ತು.

ಬುಧವಾರ ರಾತ್ರಿಯೂ ಮಲೆ ಮಹದೇಶ್ವರ ರಸ್ತೆ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅರಣ್ಯಾಧಿಕಾರಿಗಳು ವಿಶೇಷ ಕಾರ್ಯಾಚರಣೆ ಕೈಗೊಂಡರು. ಚಿರತೆ ಕಾರ್ಯಪಡೆಯನ್ನೂ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಡ್ರೋನ್‌ಗಳ ಮೂಲಕ ಕಣ್ಗಾವಲು ನಡೆಸಲಾಯಿತು.

ಅರಣ್ಯ ಸಿಬ್ಬಂದಿ ಅರವಳಿಕೆ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು. ಕಾರ್ಯಾಚರಣೆಯಲ್ಲಿ ಪಶುವೈದ್ಯರಾದ ಆದರ್ಶ್ ಭಾಗವಹಿಸಿದ್ದು, ಒಟ್ಟು ಸುಮಾರು 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಈ ಚಿರತೆಯನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಈ ಕುರಿತು ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಭಾಸ್ಕರ್ ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News