ಹನೂರು ಶೂಟೌಟ್ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ
ಮೃತರು
ಚಾಮರಾಜನಗರ, ಆ.25: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಆ.14ರಂದು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಡಾ.ಎಂ.ಎ.ಸಲೀಂ ಪ್ರಕರಣದ ಹೆಚ್ಚುವರಿ ತನಿಖೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವಹಿಸುವಂತೆ ಆದೇಶಿಸಿದ್ದಾರೆ. ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನಾಲ್ಕೂ ಎಫ್ಐಆರ್ಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಈ ಸಂಬಂಧ ಚಾಮರಾಜನಗರ ಎಸ್ಪಿಗೆ ಸೂಚನೆ ನೀಡಲಾಗಿದ್ದು, ಸಿಐಡಿಯ ವಿಶೇಷ ಘಟಕದಿಂದ ಮುಂದಿನ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದರೆ, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಇದೀಗ ಈ ನಾಲ್ಕೂ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಆ. 14 ರಂದು ನಡೆಸಿದ್ದ ಗುಂಡಿನ ದಾಳಿಯಲ್ಲಿ ಬೇಟೆಗೆ ತೆರಳಿದ್ದರೆನ್ನಲಾದ ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂಬವರು ಮೃತಪಟ್ಟಿದ್ದರು.