ಕೊಳ್ಳೆಗಾಲ | ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ : ಆರೋಪಿಯ ಬಂಧನ
ಕೊಳ್ಳೆಗಾಲ : ತಾಲೂಕಿನ ಕುರಬನಕಟ್ಟೆಯ ಬಳಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬಂಧಿತ ಆರೋಪಿಯನ್ನು ತಾಲೂಕಿನ ಕುಣಗಳ್ಳಿ ಗ್ರಾಮದ ಕೃಷ್ಣಅಲಿಯಾಸ್ ಡಿಚ್ಚಿಕೃಷ್ಣ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕೃಷ್ಣ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತ ವಯಸ್ಸಿನ ಬಾಲಕಿಯ ವಾಟ್ಸ್‌ಆ್ಯಪ್ ನಂಬರ್ ಪಡೆದು ಮೆಸೇಜ್ ಮಾಡಿ ಪುಸಲಾಯಿಸಿ ಕುರುಬನ ಕಟ್ಟೆಗೆ ದೇವರ ದರ್ಶನಕ್ಕೆಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದ ಎನ್ನಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಗೆ ಅಲ್ಲಿನ ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಸುಪ್ರೀತ್ ಅವರ ತಂಡ ಕಾರ್ಯಾಚರಣೆ ಕೈಗೊಂಡು ಆರೋಪಿ ಕೃಷ್ಣನ ಕುಟುಂಬದವರು ಕೊಡಗಿನ ಸೋಮವಾರ ಪೇಟೆಯ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೆ ವಾಸಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮನೆಯಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.