×
Ad

ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ | ಶಂಕಿತ ಆರೋಪಿ ವಶಕ್ಕೆ

ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಈಶ್ವರ್‌ ಖಂಡ್ರೆ ಸೂಚನೆ

Update: 2025-10-04 20:38 IST

ಚಾಮರಾಜನಗರ, ಅ.4: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದರು.

ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.

ಜಾಗೃತಿ ಮೂಡಿಸಿ:

ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಮಗಳಲ್ಲಿ ಮತ್ತು ಅರಣ್ಯದ ಹಾಡಿಯ ಬಳಿ ವನ್ಯಜೀವಿಗಳಿಗೆ ವಿಷ ಹಾಕುತ್ತಿರುವ ಘಟನೆಗಳು ಮತ್ತು ಕಳ್ಳಬೇಟೆ ಪ್ರಕರಣಗಳು ವರದಿಯಾಗುತ್ತಿದ್ದು, ಅರಣ್ಯವಾಸಿಗಳು ಮತ್ತು ಕಾಡಿನಂಚಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಹಾಗೂ ವನ್ಯಜೀವಿಗಳಿಂದ ಬೆಳೆ ಹಾನಿ ಆಗಿದ್ದಲ್ಲಿ ಪರಿಶೀಲಿಸಿ, ಪರಿಹಾರ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಂಕಿತ ಆರೋಪಿ ವಶಕ್ಕೆ:

ಹುಲಿಯನ್ನು ಮೂರು ಭಾಗವಾಗಿ ಕತ್ತರಿಸಿ ಹತ್ಯೆ ಮಾಡಿರುವ ಪ್ರಕರಣದ ಶಂಕಿತ ಆರೋಪಿಯ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆದಿದ್ದು, ಶೀಘ್ರವೇ ಹುಲಿ ಹತ್ಯೆಗೆ ನೈಜ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಮಲೆ ಮಹದೇಶ್ವರ ಅರಣ್ಯ ಭಾಗದಲ್ಲಿ ಗಸ್ತು ಹೆಚ್ಚಿಸಲು ಸೂಚಿಸಿದ ಸಚಿವರು, ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರೆ ಕ್ರಮಕ್ಕೆ ಶಿಫಾರಸು ಮಾಡುವಂತೆ ಹಾಗೂ 5 ಹುಲಿ ಹಾಗೂ ಮೊನ್ನೆ ನಡೆದಿರುವ ಹುಲಿ ಹತ್ಯೆಯ ಆರೋಪಿಗಳಿಗೆ ಶೀಘ್ರ ಶಿಕ್ಷೆ ಕೊಡಿಸಲು ಕ್ರಮಕೈಗೊಂಡು ಸ್ಪಷ್ಟ ಸಂದೇಶ ರವಾನಿಸಲು ಸೂಚಿಸಿದರು.

ಮೂಲಸೌಕರ್ಯ ಒದಗಿಸಲು ಸೂಚನೆ:

ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿದೆಯೇ ಇಲ್ಲವೇ, ಇವರು ಸರಿಯಾಗಿ ಗಸ್ತು ನಡೆಸುತ್ತಿದ್ದಾರೋ ಇಲ್ಲವೋ, ಎಂಸ್ಟ್ರೈಪ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಸಚಿವರು ಸೂಚಿಸಿದರು.

ಸಿಬ್ಬಂದಿ ಗಸ್ತು ತಿರುಗುತ್ತಿರುವ ಕುರಿತಂತೆ ಜಿಪಿಎಸ್ ಸಹಿತ ಫೋಟೋ ತೆಗೆಯಲು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳು ಆಗಾಗ್ಗೆ ಪರಾಮರ್ಶಿಸಬೇಕು, ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದೂ ಈಶ್ವರ್‌ ಖಂಡ್ರೆ ತಿಳಿಸಿದರು.

ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿರುವ ಸಿಬ್ಬಂದಿಗೆ ಬೂಟು, ಜಾಕೆಟ್, ಕುಡಿಯುವ ನೀರು, ಆಹಾರ ಧಾನ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲೂ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ ಮತ್ತಿತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News