×
Ad

ಬಾಗೇಪಲ್ಲಿ ಸಮೀಪ ಭೀಕರ ಸರಣಿ ಅಪಘಾತ: ಐವರು ಮೃತ್ಯು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

Update: 2026-05-31 18:56 IST

ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ರವಿವಾರ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು ಹಾಗೂ ಆಟೊ ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಥಾರ್ ವಾಹನ, ಆಟೊ ಹಾಗೂ ಕ್ಯಾಂಟರ್ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬಂದ ಥಾರ್ ವಾಹನ ತನ್ನ ಮುಂದೆ ಸಾಗುತ್ತಿದ್ದ ಆಟೊಗೆ ಢಿಕ್ಕಿ ಹೊಡೆದ ಪರಿಣಾಮ, ನಿಯಂತ್ರಣ ತಪ್ಪಿದ ಆಟೊ ಮುಂಭಾಗದಲ್ಲಿದ್ದ ಕ್ಯಾಂಟರ್‌ಗೆ ಅಪ್ಪಳಿಸಿದೆ. ಢಿಕ್ಕಿಯ ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಉಮಾದೇವಿ (55), ವಿಜಯಾ (40), ಲಕ್ಷ್ಮಮ್ಮ (50), ಸರೋಜಮ್ಮ ಹಾಗೂ ಆಟೊ ಚಾಲಕ ಆಂಜಿನಪ್ಪ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಾಗೇಪಲ್ಲಿ ಪಟ್ಟಣದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಹತ್ತಕ್ಕೂ ಹೆಚ್ಚು ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News