ಚಿಕ್ಕಬಳ್ಳಾಪುರ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಂದಿಗಿರಿಧಾಮ ಪೊಲೀಸ್ ಠಾಣೆ ಮುಂಭಾಗ ಕಾರು ಮತ್ತು ಸರಕು ಸಾಗಾಣಿಕೆ ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ  ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೊಲೆರೋ ವಾಹನದ ಚಾಲಕನಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಬೆಂಗಳೂರಿನ ಯಲಹಂಕ ಮೂಲದ ರಾಜಶೇಖರ್, ವೈಷ್ಣವ್, ಯಶವಂತ್ ಹಾಗೂ ಶ್ರೇಯಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಸರಕು ಸಾಗಾಣಿಕೆ ವಾಹನದ ಚಾಲಕ ದಿನೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಯಲಹಂಕ ಮೂಲದ ಐವರು ಯುವಕರು ಕಾರಿನಲ್ಲಿ ದೇವನಹಳ್ಳಿ ಕಡೆಯಿಂದ ಚಿಕ್ಕಬಳ್ಳಾಪುರದತ್ತ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮುಂದೆ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕಲು ಕಾರು ಚಾಲಕ ಪ್ರಯತ್ನಿಸಿದ್ದು, ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆಯ ಬಲಭಾಗದ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಬಳಿಕ ಪಲ್ಟಿಯಾಗಿ ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿದ ಕಾರು, ಎದುರಿನಿಂದ ಬರುತ್ತಿದ್ದ ಬೊಲೆರೋ ವಾಹನಕ್ಕೆ ವೇಗವಾಗಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಢಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಯುವಕರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೊಲೆರೋ ವಾಹನದ ಚಾಲಕ ದಿನೇಶ್ ಅವರ ಕಾಲಿಗೂ ತೀವ್ರ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಅವರು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಲಾಹುದ್ದೀನ್ ಚಿಕ್ಕಬಳ್ಳಾಪುರ

contributor