ಚಿಕ್ಕಬಳ್ಳಾಪುರ: ರಾಜ್ಯದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್‌ಗಳ ಪ್ರಯಾಣ ದರವು ನ.5ರಿಂದ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ರವಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಮಾಹಿತಿ ನೀಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ಐದು ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇದರಿಂದ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ 2 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳು 9 ಸಾವಿರ ಕೋಟಿ ರೂ. ನಷ್ಟದಲ್ಲಿವೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ದರ ಏರಿಕೆ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಗೆ ವಹಿಸಲಾಗಿದೆ ಎಂದು ತಿಳಿಸಿದರು.

ನ. 4ರಂದು ಅಂತಿಮ ನಿರ್ಧಾರ :

ನ.4ರಂದು ಸಾರಿಗೆ ಇಲಾಖೆ ಹಾಗೂ ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಎಷ್ಟು ಪ್ರಮಾಣದಲ್ಲಿ ಪ್ರಯಾಣ ದರ ಹೆಚ್ಚಳ ಮಾಡಬೇಕು ಎಂಬುದರ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನ.5ರಿಂದ ಪರಿಷ್ಕೃತ ಪ್ರಯಾಣ ದರ ಜಾರಿಗೆ ಬರಲಿದೆ ಎಂದು ಹೇಳಿದರು.

ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಸಂಸದ ಡಾ.ಸುಧಾಕರ್ ಅವರು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಬೈರತಿ ಸುರೇಶ್, ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರಯಾಣ ದರ ಕಡಿಮೆಯಿದೆ. ಸುಧಾಕರ್ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮಾತನಾಡುವ ಬದಲು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿನ ಪ್ರಯಾಣ ದರ ಎಷ್ಟಿದೆ ಎಂಬುದನ್ನು ಗಮನಿಸಲಿ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಮುಚ್ಚಬೇಕೇ ಎಂದು ಪ್ರಶ್ನಿಸಿದರು.

ಬಿಜೆಪಿಗೆ ರೈತರಿಂದಲೇ ಪಾಠ :

ಹಾಲಿನ ದರ ಹೆಚ್ಚಳದ ಕುರಿತು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ನಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ನಮ್ಮ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಿದೆ. ಆದರೆ, ಬಿಜೆಪಿಯವರು ರೈತ ವಿರೋಧಿ ಧೋರಣೆ ಹೊಂದಿದ್ದಾರೆ. ಅವರಿಗೆ ಚುನಾವಣೆಯಲ್ಲಿ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಹಾಲಿನ ದರದಲ್ಲಿ ಹೆಚ್ಚಳ ಮಾಡಿರುವ ಪ್ರತಿ ಲೀಟರ್‌ಗೆ 8 ರೂ. ಪೈಕಿ 7 ರೂ.ಗಳನ್ನು ರೈತರಿಗೆ ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor