ಚಿಕ್ಕಬಳ್ಳಾಪುರ: ಕನ್ನಡ ಅತ್ಯಂತ ಶ್ರೇಷ್ಠ ಭಾಷೆಯಾಗಿದ್ದು, ನಮ್ಮ ಸಂಸ್ಕೃತಿ, ಸಂಭ್ರಮ, ಅಭಿಮಾನ ಹಾಗೂ ಅಸ್ಮಿತೆಯ ಸಂಕೇತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಾರಿಗೆ ಬೈರತಿ ಸುರೇಶ್ ಹೇಳಿದರು.

ಚಿಕ್ಕಬಳ್ಳಾಪುರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ನಮ್ಮ ಮಾತೃಭಾಷೆಯಾಗಿರುವುದು ನಮ್ಮ ಸೌಭಾಗ್ಯ. ನಮ್ಮ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಕರ್ನಾಟಕದ ಮಣ್ಣು, ಹವಾಗುಣ ಹಾಗೂ ವೈವಿಧ್ಯತೆ ಇಡೀ ವಿಶ್ವದ ಜನರನ್ನು ಆಕರ್ಷಿಸುತ್ತಿದೆ ಎಂದರು.

ಕನ್ನಡ ನಾಡಿನಲ್ಲಿ ಹಲವು ರಾಜಮಹಾರಾಜರು ಸಾಂಸ್ಕೃತಿಕ ವೈಭವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ದಾಸರು, ದಾರ್ಶನಿಕರು, ವಚನಕಾರರು, ಸಾಹಿತಿಗಳು ಹಾಗೂ ವಿದ್ವಾಂಸರು ವಿಶಿಷ್ಟ ಸಾಹಿತ್ಯಿಕ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದರು.

6,500 ಹೊಸ ಬಸ್‌ಗಳ ಸೇರ್ಪಡೆ :

ರಾಜ್ಯದ ಜನತೆಗೆ ಇನ್ನಷ್ಟು ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಪಿಎಂ ಇ-ಡ್ರೈವ್ ಯೋಜನೆಯಡಿ 4,500 ಹಾಗೂ ವಿಶ್ವಬ್ಯಾಂಕ್ ನೆರವಿನಲ್ಲಿ 2,000 ಬಸ್‌ಗಳನ್ನು ಪಡೆಯಲಾಗುತ್ತಿದೆ. ಈ ಮೂಲಕ ಸರ್ಕಾರಿ ಸ್ವಾಮ್ಯದ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ಒಟ್ಟು 6,500 ಹೊಸ ಬಸ್‌ಗಳನ್ನು ಹಂತ ಹಂತವಾಗಿ ಸಾರ್ವಜನಿಕ ಸೇವೆಗೆ ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆ ಯಶಸ್ವಿ :

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಇದುವರೆಗೆ 845.33 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ಸರ್ಕಾರ 22,281.94 ಕೋಟಿ ರೂ. ವೆಚ್ಚ ಮಾಡಿದೆ ಎಂದು ಮಾಹಿತಿ ನೀಡಿದರು.

10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ :

ಇಲ್ಲಿಯವರೆಗೆ 10,07,755 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲಾಗಿದೆ. ಮೆಟ್ರೋ ಮತ್ತು ಬಸ್‌ಗಳಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಇಂಟಿಗ್ರೇಟೆಡ್ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ಹೇಳಿದರು.

ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ :

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ‘ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಗೆ 3,318 ಕೋಟಿ ರೂ. ಗ್ಯಾರಂಟಿ ಅನುದಾನ :

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ 3,318.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಬಹುಕಾಲದ ಕುಡಿಯುವ ನೀರಿನ ಶಾಶ್ವತ ಯೋಜನೆಯಾದ ಎತ್ತಿನಹೊಳೆ ಯೋಜನೆಯಲ್ಲಿ ಜಿಲ್ಲೆಗೆ ಒಟ್ಟು 5.093 ಟಿಎಂಸಿ ನೀರು ಹಂಚಿಕೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

24 ಸಾವಿರ ನಿವೇಶನ ಹಂಚಿಕೆ ಕಾರ್ಯ ಪ್ರಗತಿಯಲ್ಲಿ :

ಕಂದಾಯ ಇಲಾಖೆಯಿಂದ ಜಿಲ್ಲೆಯಲ್ಲಿ ‘ಕಂದಾಯ ಗ್ರಾಮ ವಿಶೇಷ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ. ನಿವೇಶನರಹಿತರಿಗೆ ಸುಮಾರು 24,112 ನಿವೇಶನಗಳನ್ನು ಹಂಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ರೈತರಿಗೆ ನೆರವು :

ಬರ ನಿರ್ವಹಣೆಯ ಭಾಗವಾಗಿ 1.53 ಲಕ್ಷ ರೈತರನ್ನು ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲಾಗಿದೆ. ಈ ಪೈಕಿ ಬಿತ್ತನೆ ಕಾರ್ಯ ವಿಫಲವಾಗಿರುವ 1.3 ಲಕ್ಷ ರೈತರಿಗೆ 140.44 ಕೋಟಿ ರೂ. ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ರೈತರ ಸಂಕಷ್ಟವನ್ನು ಅರಿತಿರುವ ಸರ್ಕಾರವು ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂ. ಹೆಚ್ಚಿಸಿದ್ದು, ಇದರಲ್ಲಿ 7 ರೂ. ನೇರವಾಗಿ ರೈತರಿಗೆ ತಲುಪಲಿದೆ. ಈ ಮೂಲಕ ಬರದ ಛಾಯೆಯಲ್ಲಿ ರೈತರ ಬೆಂಬಲಕ್ಕೆ ಸರ್ಕಾರ ನಿಂತಿದೆ ಎಂದರು.

ಹೈಟೆಕ್ ಮಾರುಕಟ್ಟೆ ನಿರ್ಮಾಣ :

ಶಿಡ್ಲಘಟ್ಟ ತಾಲ್ಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ, ಚಿಕ್ಕಬಳ್ಳಾಪುರದಲ್ಲಿ 141.50 ಕೋಟಿ ರೂ. ವೆಚ್ಚದ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ಹಾಗೂ ನಂದಿ ಬೆಟ್ಟದಲ್ಲಿ 94 ಕೋಟಿ ರೂ. ವೆಚ್ಚದ ರೋಪ್‌ವೇ ನಿರ್ಮಾಣ ಕಾರ್ಯಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸಚಿವರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor