ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ | ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು
Update: 2026-01-31 00:35 IST
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶುಕ್ರವಾರ ಜೆಎಂಎಫ್‌ಸಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಬ್ಯಾನರ್ ತೆರವುಗೊಳಿಸುವ ವಿಚಾರದಲ್ಲಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದು, ಸುಮಾರು 13 ದಿನಗಳ ಬಳಿಕ ಕೇರಳ ಗಡಿ ಪ್ರದೇಶದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದರು.ಬಂಧನದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದರು.
ಬಿಡುಗಡೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೀವ್ ಗೌಡ, ಸತ್ಯ ಮತ್ತು ನ್ಯಾಯಕ್ಕೆ ನಾನು ಸದಾ ತಲೆಬಾಗುತ್ತೇನೆ. ಜಾಮೀನು ಸಿಕ್ಕಿರುವುದು ಖುಷಿ ತಂದಿದೆ ಎಂದರು.