ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಸ್ಥಳೀಯ ಸಂಘಟನೆಗಳು,ರೈತರು ಗುರುವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ವ್ಯಾಪಕ ಜನಬೆಂಬಲ ವ್ಯಕ್ತವಾಗಿದ್ದು, ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಬಂದ್ ಹಿನ್ನೆಲೆಯಲ್ಲಿ ಬಾಳೆಹೊನ್ನೂರಿನ ಪ್ರಮುಖ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದಲ್ಲದೆ, ವಾಹನಗಳ ಸಂಚಾರವೂ ವಿರಳವಾಗಿತ್ತು. ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳು ಬಹುತೇಕ ಬಿಕೋ ಎನ್ನುತ್ತಿದ್ದವು.

ಸ್ಥಳೀಯ ಸಂಘಟನೆಗಳು ಹಾಗೂ ಮಲೆನಾಡಿನ ರೈತರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಶೃಂಗೇರಿ, ಕೊಪ್ಪ ಹಾಗೂ ಎನ್.ಆರ್. ಪುರ ಭಾಗಗಳಿಂದ ನೂರಾರು ಮಂದಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಕಸ್ತೂರಿರಂಗನ್ ವರದಿ ಜಾರಿ ಹಾಗೂ ಸರಕಾರದ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡಿನ ಜನರ ಅಸ್ತಿತ್ವ, ಕೃಷಿ ಚಟುವಟಿಕೆ ಮತ್ತು ರೈತರ ಬದುಕಿನ ಮೇಲೆ ಕಸ್ತೂರಿರಂಗನ್ ವರದಿ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ವರದಿ ಜಾರಿಗೆ ಬೆಂಬಲ ನೀಡುತ್ತಿರುವ ಪರಿಸರವಾದಿಗಳ ಧೋರಣೆಯನ್ನೂ ಅವರು ಖಂಡಿಸಿದರು.

ಮಲೆನಾಡಿನ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ವರದಿ ಜಾರಿಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ ಪ್ರತಿಭಟನಾಕಾರರು, ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ಕೈಬಿಡಬೇಕು. ಸರಕಾರ ತಮ್ಮ ಬೇಡಿಕೆಗೆ ಸ್ಪಂದಿಸದೆ ವರದಿ ಜಾರಿಗೆ ಮುಂದಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ, ಕಸ್ತೂರಿ ರಂಗನ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸುವ ಪ್ರಕ್ರಿಯೆ ಮತ್ತೆ ಚರ್ಚೆಯಲ್ಲಿದೆ. ಪರಿಸರ ಸಂರಕ್ಷಣೆಯ ಜೊತೆಗೆ ಜನರ ಜೀವನೋಪಾಯ ಮತ್ತು ಅಭಿವೃದ್ಧಿಯನ್ನು ರಕ್ಷಿಸುವ ಅವಶ್ಯ ಇದೆ. ಯಾವುದೇ ಅಂತಿಮ ನಿರ್ಧಾರಕ್ಕೂ ಮುನ್ನ ಮಲೆನಾಡಿನ ಜನರ ಧ್ವನಿಗೆ ಆದ್ಯತೆ ನೀಡಬೇಕು ಎಂದರು.

ಈ ವಿಷಯದಲ್ಲಿ ರಾಜ್ಯ ಸರಕಾರ ಮತ್ತೊಮ್ಮೆ ಗಟ್ಟಿ ಧ್ವನಿಯೆತ್ತಿ ಕಸ್ತೂರಿ ರಂಗನ್ ಸಮಿತಿಯ ಶಿಫಾರಸುಗಳಿಂದ ಆಗುವ ತೊಂದರೆಗಳನ್ನು ತಪ್ಪಿಸುವ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಸರ್ವ ಪಕ್ಷಗಳ ಹಾಗೂ ಮಲೆನಾಡಿನ ಪ್ರಮುಖ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಿ ಕಾರ್ಯೋನ್ಮುಖರಾಗಬೇಕೆಂದು ಶ್ರೀಗಳು ಆಗ್ರಹಿಸಿದರು.

ಈ ಸಂದರ್ಭ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಇದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor