×
Ad

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿನ ಕುರಿತ ವಿ.ಪ. ಉಪಸಭಾಪತಿ ಅರ್ಜಿ; ಮಾ.25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Update: 2025-03-04 23:28 IST

ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿದೆಯೋ, ಇಲ್ಲವೋ ಎಂದು ಪ್ರಶ್ನಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಹಾಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಾ.25ಕ್ಕೆ ಮುಂದೂಡಿದೆ.

2021ರ ಡಿ.10ರಂದು ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಕೇವಲ ಆರು ಮತಗಳ ಅಂತರದಿಂದ ಕಾಂಗ್ರೆಸ್‌ನ ಎ.ವಿ.ಗಾಯತ್ರಿ ಶಾಂತೇಗೌಡ ವಿರುದ್ಧ ಗೆಲುವು ಸಾಧಿಸಿದ್ದರು. ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇತ್ತೀಚೆಗೆ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಾ.7ರೊಳಗೆ ಮರು ಮತ ಎಣಿಕೆ ನಡೆಸಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಪುರಸ್ಕರಿಸದಂತೆ ಎಂ.ಕೆ.ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು ಮಾ.4ರೊಳಗೆ ಮರು ಮತ ಎಣಿಕೆ ನಡೆಸಿ ನ್ಯಾಯಾಲಯಕ್ಕೆ ಮುಚ್ಚಿದ ಲಕೊಟೆಯಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಸುಪ್ರೀಂ ಕೋರ್ಟ್‌ನ ಆದೇಶದಂತೆ ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ಜಿಲ್ಲಾ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಫೆ.28ರಂದು ಮರು ಎಣಿಕೆ ನಡೆಸಿ ಮಂಗಳವಾರ ಮರು ಮತ ಎಣಿಕೆಯ ಸಂಪೂರ್ಣ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ.

ಎಂ.ಕೆ.ಪ್ರಾಣೇಶ್ ಸಲ್ಲಿಸಿದ್ದ ಅರ್ಜಿ ಸಂಬಂಧ ತಕರಾರಿದ್ದಲ್ಲಿ ತಕರಾರು ಅರ್ಜಿ ಸಲ್ಲಿಸುವಂತೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News