×
Ad

ಮೂಡಿಗೆರೆಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಮೃತ್ಯು

Update: 2024-05-24 17:18 IST

ಚಿಕ್ಕಮಗಳೂರು : ಮೆಸ್ಕಾಂ ಲಾರಿಗೆ ಓಮ್ನಿ ಮತ್ತು ಆಲ್ಟೋ ಕಾರುಗಳು ಢಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಶುಕ್ರವಾರ ಸಂಜೆ ಸುಮಾರು ನಾಲ್ಕು ಗಂಟೆ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಓಮ್ನಿ ಮತ್ತು ಆಲ್ಟೋ ಕಾರುಗಳು ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತರೆಲ್ಲರು ಚಿತ್ರದುರ್ಗ ಮತ್ತು ದಾವಣಗೆರೆ ಮೂಲದವರು ಎಂದು ಹೇಳಲಾಗುತ್ತಿದ್ದು, ಒಂದೇ ಕುಟುಂಬದ ಸದಸ್ಯರು ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಾಸಾಗುತ್ತಿದ್ದರು ಎನ್ನಲಾಗಿದೆ.

ವಾಹನವೊಂದನ್ನು ಓವರ್‌ ಟೇಕ್ ಮಾಡಿ ಸಾಗುವಾಗ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ಹಿಂದಿನಿಂದ ಬರುತ್ತಿದ್ದ ಅದೇ ಕುಟುಂಬದ ಆಲ್ಟೋ ಕಾರು ಕೂಡ ಓಮ್ನಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಓಮ್ನಿ ಕಾರು ನಜ್ಜುಗುಜ್ಜಾಗಿದ್ದು, ಓಮ್ನಿಯಲ್ಲಿದ್ದ ಮೂವರು ಪುರುಷರು ಮತ್ತು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇತರೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News