Chikkamagaluru | ಪೋಕ್ಸೋ ಪ್ರಕರಣ : ಆರೋಪಿಗೆ 7 ವರ್ಷ ಶಿಕ್ಷೆ, 45 ರೂ. ಸಾವಿರ ದಂಡ
ಚಿಕ್ಕಮಗಳೂರು : ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2025ರ ಡಿಸೆಂಬರ್ 1ರಂದು ದಾಖಲಾಗಿದ್ದ ಪ್ರಕರಣದಲ್ಲಿ ಧೂಪದಖಾನ್ ಗ್ರಾಮದ ನಾಗರಾಜ (34) ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 137(2), 127(2), 65(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4 ಮತ್ತು 10ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಆ.5ರಂದು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 45 ಸಾವಿರ ರೂ. ದಂಡ ವಿಧಿಸಿದೆ.
ಅಲ್ಲದೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ–2011ರಡಿ ಸಂತ್ರಸ್ತ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ತನಿಖೆಯನ್ನು ತರೀಕೆರೆ ವೃತ್ತದ ಸಿಪಿಐ ಗಿರೀಶ್ ಬಿ.ವಿ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ತನಿಖಾ ಸಹಾಯಕರಾಗಿ ಸಿದ್ಧರಾಮಪ್ಪ ಎಸ್.ಸಿ. ಹಾಗೂ ಉಮೇಶ್ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ್ದರು.
ಪ್ರಕರಣದ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ಯಶಸ್ವಿಯಾಗಿ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿ ಶ್ಲಾಘಿಸಿದ್ದಾರೆ.