ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಪೋಷಕರೊಂದಿಗೆ ನವರಾತ್ರಿ ಪೂಜೆಗೆ ಶೃಂಗೇರಿಗೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಪಾರ್ಕಿಂಗ್ ಲಾಟ್ ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೋಲಾರ ಜಿಲ್ಲೆಯ ಮಾಲೂರು ಮೂಲದ ರಾಘವೇಂದ್ರ ಪೂಜಾರಿ (20) ಎಂದು ಗುರುತಿಸಲಾಗಿದೆ. ಇವರು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ನದಿಯಲ್ಲಿ ಈಜಾಡಿ ವಾಪಸ್ ಬಂದಿದ್ದ ಯುವಕ ಮತ್ತೆ ನೀರಿಗೆ ಇಳಿದಾಗ ಮುಳುಗಿದ್ದಾರೆ ಎನ್ನಲಾಗಿದೆ.

ಯುವಕ ನದಿಯಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಅಲ್ಲಿದ್ದ ಮಹಿಳೆಯೊಬ್ಬರು ಕೂಗಿಕೊಂಡಿದ್ದಾರೆ. ಸ್ಥಳೀಯರು ಯುವಕನನ್ನು ರಕ್ಷಿಸಲು ಮುಂದಾಗುವಷ್ಟರಲ್ಲಿ ಅವರು ನೀರಿನಲ್ಲಿ ಮುಳುಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ನದಿಯ ಆಳದಲ್ಲಿ ಯುವಕನ ಮೃತದೇಹ ಪತ್ತೆಹಚ್ಚಲು ಮಲ್ಪೆಯ ಈಶ್ವರ್ ಅವರ ತಂಡವೂ ಸ್ಥಳಕ್ಕೆ ಆಗಮಿಸಿದೆ.

ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor