ಮೂಡಿಗೆರೆ: ಭಾರಿ ಗಾಳಿ-ಮಳೆಗೆ ಮರ ಬಿದ್ದು ಮನೆ ಸಂಪೂರ್ಣ ಹಾನಿ
Update: 2026-07-05 11:18 IST
ಮೂಡಿಗೆರೆ: ಶನಿವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಯ ವೇಳೆ ಬೃಹತ್ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿಗೊಳಗಾದ ಘಟನೆ ತಾಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ಬಡವನಡಿಣ್ಣೆಯಲ್ಲಿ ನಡೆದಿದೆ.
ಘಟನೆಯಲ್ಲಿ ಬಡವನಡಿಣ್ಣೆ ನಿವಾಸಿ ಜಾನಕಿ ಕೋಂ ಸಿದ್ಧಪ್ಪ ಅವರ ಮನೆ ಸಂಪೂರ್ಣಹಾನಿಗೊಳಗಾಗಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಟ್ಟಗೆರೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಯ ಮೌಲ್ಯಮಾಪನ ಕಾರ್ಯ ಕೈಗೊಂಡಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.