ಚಿಕ್ಕಮಗಳೂರಿನಲ್ಲಿ ಮುಂದುವರಿ ಮಳೆ ಆರ್ಭಟ: ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಬುಧವಾರವೂ ಮಳೆ ಆರ್ಭಟಿಸಿದ್ದು, ಭಾರೀ ಮಳೆಯಿಂದಾಗಿ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಶೃಂಗೇರಿ-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಭಾರೀ ಮಳೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಮಲೆನಾಡು ಭಾಗದ ಕಳಸ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಭಾರೀ ಮಳೆಯಾಗಿದ್ದರೇ, ಮಧ್ಯಾಹ್ನದ ವೇಳೆ ಕೊಂಚ ಬಿಡುವು ನೀಡಿದ್ದ ಮಳೆ ಸಂಜೆ ವೇಳೆ ಮತ್ತೆ ಆರ್ಭಟಿಸಿತ್ತು. ಭಾರೀ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಅಲ್ಲಲ್ಲಿ ರಸ್ತೆಗಳ ಮೇಲೆ ಮರ ಉರುಳಿ ವಾಹನಗಳ ಸಂಚಾರಕ್ಕೂ ತೊಂದರೆಯಾಗಿತ್ತು.
ಕಳಸ ತಾಲೂಕಿನಾದ್ಯಂತ ಬುಧವಾರ ಬೆಳ್ಗಗೆ ಭಾರೀ ಮಳೆ ಸುರಿದಿದ್ದು, ಮಳೆ ನೀರು ಅಲ್ಲಲ್ಲಿ ರಸ್ತೆ ಮೇಲೆ ಹರಿದ ಪರಿಣಾಮ ಜನ, ವಾಹನಗಳ ಸಂಚಾರಕ್ಕೂ ತೊಂದರೆಯಾಗಿತ್ತು. ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮಳೆಯಾಗಿದ್ದರೇ, ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಕಿಗ್ಗಾ, ಸುತ್ತಮುತ್ತ ಭಾರೀ ಮಳೆಯಾಗಿದೆ.
ಕೊಪ್ಪ ತಾಲೂಕಿನಲ್ಲೂ ಬುಧವಾರ ಮಳೆ ಆರ್ಭಟಿಸಿದ್ದು, ಜಯಪುರ-ಬಸರಿಕಟ್ಟೆ ಸಂಪರ್ಕದ ಕೊಗ್ರೆ ಗ್ರಾಮದ ಬಳಿ ಭೂಕುಸಿತ ಸಂಭವಿಸಿದ್ದರಿಂದ ವಾಹನಗಳ ಸಂಚಾರವನ್ನು ಮಂಗಳವಾರ ರಾತ್ರಿಯಿಂದ ಬಂದ್ ಮಾಡಲಾಗಿತ್ತು. ಬುಧವಾರ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಮುಕ್ತಗೊಳಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನಾದ್ಯಂತ ಬೆಳಗ್ಗೆ ಬಿಡುವು ನೀಡಿದ್ದ ಮಳೆ ಸಂಜೆ ವೇಳೆ ಕೆಲ ಹೊತ್ತು ಸಾಧಾರಣವಾಗಿ ಸುರಿದಿದ್ದರೇ, ಕಡೂರು, ತರೀಕೆರೆ, ಅಜ್ಜಂಪುರ ತಾಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಸುರಿದಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಬುಧವಾರ ಮಲೆನಾಡು ಭಾಗದ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಜಿಲ್ಲಾಡಳಿತ ಘೋಷಣೆ ಮಾಡಿದ್ದರೆ, ಗುರುವಾರವೂ ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶಿಸಿದೆ.