ಪ್ರಧಾನಿ ಮೋದಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ವಾಗ್ದಾನ ಈಡೇರಿಸುವಲ್ಲಿ ವಿಫಲವಾಗಿದ್ದಾರೆ : ಸಿದ್ದರಾಮಯ್ಯ
ಚಿಕ್ಕಮಗಳೂರು : ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ವಾಗ್ದಾನ ಈಡೇರಿಸುವಲ್ಲಿ ವಿಫಲವಾಗಿದ್ದಾರೆ. ಇವರ ಆಡಳಿತದಲ್ಲಿ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ನಿರುದ್ಯೋಗ ಅಧಿಕಗೊಂಡಿದೆ. ದೇಶದ ಸಾಲ ದುಪ್ಪಟ್ಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದಾರೆ.
ನಗರದ ಕೆಇಬಿ ಸಮೀಪದಲ್ಲಿರುವ ಮೈದಾನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 110ನೇ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿವರೆಗೆ ದೇಶ ಆಳಿದ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ನರೇಂದ್ರ ಮೋದಿ ಅಧಿಕಾರವಧಿಯಲ್ಲಿ ದೇಶದ ಒಟ್ಟು ಸಾಲ 200 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಈ ಮೂಲಕ ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ದೇಶದಾದ್ಯಂತ ಎಲ್ಲ ಸಮಸ್ಯೆಗಳು ಹೆಚ್ಚಳಗೊಂಡಿವೆ. ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಈ ಜಿಲ್ಲೆಯಲ್ಲಿ ಕೋಮುವಾದಿ ರಾಜಕಾರಣ ನಡೆಸುತ್ತಿದ್ದ ನಾಯಕರನ್ನು ಸೋಲಿಸಿದ ಮತದಾರರಿಗೆ ಶತಕೋಟಿ ನಮನಗಳು. ಆದರೆ ನಮ್ಮ ಹೋರಾಟ ವ್ಯಕ್ತಿಗಳ ವಿರುದ್ಧ ಮಾತ್ರವಲ್ಲ, ಸಮಾಜವನ್ನು ಧರ್ಮದ ಹೆಸರಿನಲ್ಲಿ ವಿಭಜಿಸುವ ಕೋಮುವಾದಿ ಸಿದ್ಧಾಂತದ ವಿರುದ್ಧವೂ ಆಗಿರಬೇಕು. ಈ ಐತಿಹಾಸಿಕ ನೆಲದಿಂದ ಕೋಮುವಾದವನ್ನು ಸಂಪೂರ್ಣವಾಗಿ ನಿರ್ಮೂಲನ ಮಾಡುವ ಜವಾಬ್ದಾರಿ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದು ಕರೆ ನೀಡಿದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಝ್ವಾನ್‌ಅರ್ಶದ್ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಅಂಶುಮಂತ್ ಪಕ್ಷದ ಬಾವುಟವನ್ನು ನೀಡುವ ಮೂಲಕ ನೂತನ ಅಧ್ಯಕ್ಷ ಮಂಜೇಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಶಾಸಕರಾದ ತಮ್ಮಯ್ಯ, ಕೆ.ಎಸ್.ಆನಂದ್, ಜಿ.ಎಚ್.ಶ್ರೀನಿವಾಸ, ನಯನಾ ಮೋಟಮ್ಮ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಆರತಿಕೃಷ್ಣ, ಎ.ವಿ.ಗಾಯತ್ರಿ ಶಾಂತೇಗೌಡ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಮಾಜಿ ಸಚಿವೆ ಮೋಟಮ್ಮ, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಬಿ.ಎಚ್.ಹರೀಶ್, ಮುಖಂಡರಾದ ಡಿ.ಎಲ್.ವಿಜಯಕುಮಾರ್, ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ, ರೇಖಾ ಹುಲಿಯಪ್ಪಗೌಡ, ಎಂ.ಎಲ್.ಮೂರ್ತಿ, ಸಚಿನ್ ಮೀಗಾ, ಕೆ.ಮಹ್ಮದ್ ಉಪಸ್ಥಿತರಿದ್ದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಸ್ವಾಗತಿಸಿದರು. ಜಿಲ್ಲಾ ವಕ್ತಾರ ರೂಬೆನ್‌ಮೊಸಸ್ ನಿರೂಪಿಸಿದರು.