ಶೃಂಗೇರಿ : ಅಂಚೆ ಮತಗಳ ಮರು ಎಣಿಕೆ ಪ್ರಕರಣ; ವಿಚಾರಣೆ ಆಗಸ್ಟ್ 19ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

Update: 2026-07-30 14:30 IST

ಟಿ.ಡಿ. ರಾಜೇಗೌಡ (ಒಳಚಿತ್ರದಲ್ಲಿ) 

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

2023ರ ಚುನಾವಣಾ ಫಲಿತಾಂಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಹೊಸ ಫಲಿತಾಂಶ ಪ್ರಕಟಿಸುವಂತೆ ಆದೇಶ ನೀಡಿತ್ತು.

ಹೈಕೋರ್ಟ್ ಆದೇಶದಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಟಿ.ಡಿ. ರಾಜೇಗೌಡ ಅವರ ಮತಗಳ ಸಂಖ್ಯೆ 255ರಷ್ಟು ಕುಸಿದು, ಅವರು ಸೋಲನುಭವಿಸುವಂತಾಯಿತು.

ಮರು ಎಣಿಕೆಯ ಪ್ರಕ್ರಿಯೆಯನ್ನೇ ಪ್ರಶ್ನಿಸಿದ ಟಿ.ಡಿ. ರಾಜೇಗೌಡ ಅವರು ತಕ್ಷಣವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಂಚೆ ಮತಗಳ ಮರು ಎಣಿಕೆಗೂ ಮುನ್ನ ಬ್ಯಾಲೆಟ್ ಪೇಪರ್ ಇದ್ದ ಬಾಕ್ಸ್ ತೆರೆಯಲಾಗಿತ್ತು ಹಾಗೂ ಮತಗಳ ಅಕ್ರಮ ಪ್ರಕ್ರಿಯೆ (ವೋಟ್ ಟ್ಯಾಂಪರಿಂಗ್) ನಡೆದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿ, ಟಿ.ಡಿ. ರಾಜೇಗೌಡ ಅವರನ್ನೇ ಶಾಸಕ ಸ್ಥಾನದಲ್ಲಿ ಮುಂದುವರಿಸುವಂತೆ ಮಧ್ಯಂತರ ಆದೇಶ ನೀಡಿತ್ತು.

ಜು.30 ರಂದು ಬುಧವಾರ ಪ್ರಕರಣವನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News