ಚಿತ್ರದುರ್ಗ ಬಸ್ ದುರಂತ | ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ
ಹೊಸದಿಲ್ಲಿ: ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
“ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಜನರು ಮೃತಪಟ್ಟಿರುವ ಘಟನೆ ತೀವ್ರ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ,” ಎಂದು ಪ್ರಧಾನಿ ತಿಳಿಸಿದ್ದಾರೆ.
ಗುರುವಾರ ಮುಂಜಾನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ಹಾಗೂ ಚಿತ್ರದುರ್ಗದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಿರಿಯೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಲಾರಿ ರಸ್ತೆ ವಿಭಜಕವನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಹಿರಿಯೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.