Chitradurga | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪೊಕ್ಸೊ ಕಾಯ್ದೆಯಡಿ ಶಿಕ್ಷಕನ ಬಂಧನ
ಸಾಂದರ್ಭಿಕ ಚಿತ್ರ | Photo Credit : freepik
ಚಿತ್ರದುರ್ಗ : ತಾಲೂಕಿನ ಖಾಸಗಿ ಶಾಲೆಯೊಂದರ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಭರಮಸಾಗರ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ವರದಿಯಾಗಿದೆ.
ರಂಗಣ್ಣ (55) ಆರೋಪಿ ಶಿಕ್ಷಕನಾಗಿದ್ದು, ಈತನ ವಿರುದ್ಧ ಮಕ್ಕಳ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯು ನೀಡಿದ ದೂರಿನ ಮೇರೆಗೆ ಪೊಲೀಸರು ಫೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ರಂಗಣ್ಣ, ಶಾಲೆಯ ಸುಮಾರು 6 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆಡಳಿತ ಮಂಡಳಿಯಿಂದಲೇ ದೂರು: ಶಾಲೆಯ ಆಡಳಿತ ಸಮಿತಿಯು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಭರಮಸಾಗರ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ರಂಗಣ್ಣನ ವಿರುದ್ಧ ಅಧಿಕೃತವಾಗಿ ದೂರು ನೀಡಿದೆ. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.