×
Ad

ಚಿತ್ರದುರ್ಗ | ಸಂಸ್ಕೃತ ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ

ಅಜ್ಜಿಗೆ ಫೋನ್ ಕರೆ ಮಾಡಿದ್ದಕ್ಕೆಆಕ್ಷೇಪಿಸಿ ಕೃತ್ಯ: ಹಲ್ಲೆ ವಿಡಿಯೋ ವೈರಲ್

Update: 2025-10-21 10:09 IST

ಚಿತ್ರದುರ್ಗ: ಮನೆಗೆ ಫೋನ್ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಯೋರ್ವನಿಗೆ ಮುಖ್ಯ ಶಿಕ್ಷಕ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಈ ಬಗ್ಗೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಯಕನಹಟ್ಟಿ ಗುರು ತಿಪ್ಪೇರುದ್ರ ಸ್ವಾಮಿ ದೇವಾಲಯ ಅಧೀನದ ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ 3ನೇ ತರಗತಿಯ ವಿದ್ಯಾರ್ಥಿ ತರುಣ್(9) ಎಂಬಾತನ ಮೇಲೆ ಕ್ರೌರ್ಯ ಮೆರೆದಿರುವ ವೀಡಿಯೊ ವೈರಲ್ ಆಗಿದೆ.

ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಯಾಗಿರುವ ತರುಣ್ ತನ್ನ ಅಜ್ಜಿಗೆ ಫೋನ್ ಮಾಡಿದ್ದನ್ನು ಆಕ್ಷೇಪಿಸಿ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್, ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದಾನೆ. ಈ ಅಮಾನುಷ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿಕ್ಷಕನ ದುಷ್ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಹಲ್ಲೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆಯ ಕುರಿತು ಗುರು ತಿಪ್ಪೇಸ್ವಾಮಿ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ನೀಡಿರುವ ದೂರಿನಂತೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News