ನಾಳೆಯಿಂದ ಕೋವಿಡ್ ಲಸಿಕೆ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ: ಸಚಿವ ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಬ್ಬರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ. ಆದರೆ, 60 ವರ್ಷ ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ನಾಳೆಯಿಂದಲೇ (ಜ.3) ಆಯಾ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಒಂದು ಮತ್ತು ಎರಡನೆ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಪ್ರಸ್ತುತ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ಉಲ್ಲೇಖ ಮಾಡಿದರು.
ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್-1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಎಂಬ ಮಾಹಿತಿ ಇದೆ.
ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದ ಅವರು, ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದೂ ಸಚಿವರು ಹೇಳಿದರು.
ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆ ಮೀಸಲು
ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದು, ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ. ಬದಲಾಗಿ, ವಿವಿಧ ವ್ಯಾಧಿಗಳಿಂದ ಬಳಲುತ್ತಿದ್ದರು ಎನ್ನುವ ಅಂಶ ಪರಿಶೀಲನೆ ವೇಳೆ ಗೊತ್ತಾಗಿದೆ. ಅದೇ ರೀತಿ, ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆ ಮೀಸಲಿಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಝಾವೇದ್ ಅಖ್ತರ್ , ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಪ್ರಮುಖರಿದ್ದರು.