×
Ad

ದ.ಕ. ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್

Update: 2025-12-06 21:54 IST

ಮಂಗಳೂರು, ಡಿ.6 : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯ ನೀಡಲು ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ್ ತಿಳಿಸಿದ್ಧಾರೆ.

ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದಾಲತ್ ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳ ಮಾಹಿತಿ ನೀಡಿದರು.

ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ಕು ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ, ಅಕ್ರಮ ಮರಳು ಸಾಗಾಣಿಕೆ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಈ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ, ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗು ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ ಎಂದರು.

ಒಟ್ಟು 55,555 ಪ್ರಕರಣ :

ಒಟ್ಟು 55,555 ಪ್ರಕರಣಗಳಲ್ಲಿ, ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಇತ್ಯರ್ಥಪಡಿಸಬಹುದಾದ 9,051 ಪ್ರಕರಣಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ, 3,818 ಪ್ರಕರಣಗಳನ್ನು ಲೋಕ ಅದಾಲತ್ ಉಲ್ಲೇಖಿಸಲಾಗಿದೆ. ಈ ಮಧ್ಯೆ, 957 ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿಸಲು ಸಿದ್ದವಾಗಿದೆ. 52 ಪ್ರಕರಣಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ ಮತ್ತು ಇದುವರೆಗೆ 15,47,49,578 ರೂ. ಗಳನ್ನು ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಸೆ.13 ರಂದು ಬಾಕಿ ಉಳಿದಿದ್ದ 3,684 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

ಪ್ರಕರಣಗಳನ್ನು ಬಗೆಹರಿಸಲು ಮಂಗಳೂರಿನಲ್ಲಿ 16 ಸೇರಿದಂತೆ ಜಿಲ್ಲೆಯಲ್ಲಿ 55 ಮಧ್ಯಸ್ಥಗಾರರು ಇದ್ದಾರೆ. ಇದು ಸಾಕಾಗುವುದಿಲ್ಲ ವಿವಿಧ ತಾಲೂಕುಗಳ ನ್ಯಾಯಾಲಯಗಳಿಗೆ ಆವಶ್ಯಕತೆ ಅನುಗುಣವಾಗಿ ಮಧ್ಯಸ್ಥಗಾರರ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.

ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯತಿ :

ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಾಗಿ ಬಾಕಿ ಇರುವ ಡಿಎಸ್‌ಎ(ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯತಿ ನೀಡಿ 2025 ನ.21ರಿಂದ ಡಿ.12ತನಕ ಪ್ರಕರಣಗಳ ಇತ್ಯರ್ಥಗೊಳಿಸಲು ಅವಕಾಶ ನೀಡಲಾಗಿದೆ.

ಪೊಲೀಸ್ ಇಲಾಖೆಯ ಇ - ಚನಲ್‌ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯತಿ ನೀಡಲಾಗಿದ್ದು, 2025 ನ.21ರಿಂದ ಡಿ.12ರ ವರೆಗೆ ಬಾಕಿ ಇರುವ ಪ್ರಕರಣಗಳಿಗೆ ಇದು ಅನ್ವಯವಾಗುತ್ತದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News