ಬರಪೀಡಿತ ಪ್ರದೇಶಗಳ ಸಿಎಂ ವೈಮಾನಿಕ ಸಮೀಕ್ಷೆ ಕುರಿತ ಬಿಜೆಪಿಯ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ತಿರುಗೇಟು
"ನೆರೆ, ಬರ ಬಂದಾಗ ಮಹಾರಾಷ್ಟ್ರ, ಆಂಧ್ರಪ್ರದೇಶಕ್ಕೆ ತೆರಳುವ ವಿಶ್ವ ಗುರು ಕರ್ನಾಟಕಕ್ಕೆ ಮಾತ್ರ ಬಂದಿಲ್ಲ"
ಮಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಂದಾಯ ಸಚಿವರು ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಎಲ್ಲೆಡೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ಸಚಿವರು ಅಂತಿಮ ವರದಿಯನ್ನೂ ಸಲ್ಲಿಸಿದ್ದಾರೆ. ಆ ವರದಿಯನ್ನು ಪುಷ್ಠೀಕರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ ಎಂದು ಹೇಳಿದರು.
ಈ ವಿಶ್ವ ಗುರು ನೆರೆ ಹಾಗೂ ಬರ ಬಂದಾಗ ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳುತ್ತಾರೆ. ಆದರೆ ಕರ್ನಾಟಕಕ್ಕೆ ಮಾತ್ರ ಬಂದಿಲ್ಲ ಎಂದು ಟೀಕಿಸಿದರು.
ರಾಜ್ಯದ ಉಸ್ತುವಾರಿ ಸಚಿವರು ಈಗಾಗಲೇ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಎಲ್ಲಾ ಸಚಿವರ ಪರಿಶೀಲನೆಯ ಬಳಿಕ ಸಮಗ್ರ ವರದಿ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.